ಕಾರವಾರ: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವಿರುದ್ಧ ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ದೂರುಗಳು, ಬಾಕಿ ಇರುವ ಪ್ರಕರಣಗಳ ಕುರಿತು ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ದೂರುಗಳ ವಿಚಾರಣೆ ಹಾಗೂ ಪ್ರಕರಣಗಳನ್ನು ಕಾನೂನಾತ್ಮಕವಾಗಿ ವಿಲೇವಾರಿ ಮಾಡಿದರು.ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಗೂ ಎದುರುದಾರರ ಸಭೆಯಲ್ಲಿ ಒಟ್ಟು 80 ಪ್ರಕರಣಗಳ ವಿಚಾರಣೆ ನಡೆಸಿದರು.ದೂರುದಾರರು ತಮ್ಮ ಅಹವಾಲುಗಳನ್ನು ನೇರವಾಗಿ ಮಂಡಿಸಲು ಹಾಗೂ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದ ಅವರು, ಎದುರುದಾರರಿಗೂ ತಮ್ಮ ನಿಲುವು ಹಾಗೂ ದಾಖಲೆಗಳನ್ನು ಮಂಡಿಸಲು ಸಮಾನ ಅವಕಾಶ ನೀಡಿದರು.ದೂರುಗಳನ್ನು ಸಲ್ಲಿಸಿ ವಿಚಾರಣೆಗೆ ಗೈರು ಹಾಜರಾಗಿದ್ದ ದೂರುದಾರರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಅವರ ದೂರುಗಳಿಗೆ ನ್ಯಾಯ ಒದಗಿಸುವುದರ ಜತೆಗೆ ಅರ್ಜಿಗಳನ್ನು ವಿಲೇವಾರಿ ಮಾಡಿ ಸೌಲಭ್ಯ ಒದಗಿಸಿರುವ ಬಗ್ಗೆ ಅಧಿಕಾರಿಗಳು ನೀಡಿದ ಮಾಹಿತಿ ಬಗ್ಗೆ ಫಲಾನುಭವಿಗಳನ್ನು ಸಂಪರ್ಕಿಸಿ ಖಚಿತಪಡಿಸಿಕೊಂಡಿದ್ದು ವಿಶೇಷವಾಗಿತ್ತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ., ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಇದ್ದರು.