ಕನ್ನಡಪ್ರಭವಾರ್ತೆ ಬೆಂಗಳೂರು
ಜೂ.13ರಂದು ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಸುಮಲತಾ ಅವರಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ. ಈ ಮೂಲಕ ವಿಧಾನಪರಿಷತ್ ಸದಸ್ಯೆಯನ್ನಾಗಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ 15ಕ್ಕೂ ಹೆಚ್ಚು ಆಕಾಂಕ್ಷಿಗಳ ಹೆಸರಿನ ಬಗ್ಗೆ ಚರ್ಚೆ ನಡೆಸಲಾಗಿದೆ. ಇದರಲ್ಲಿ ಸುಮಲತಾ ಹೆಸರು ಸಹ ಚರ್ಚೆ ಆಗಿದೆ ಎಂದು ಹೇಳಲಾಗಿದೆ. ಅಲ್ಲದೇ, ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್‌ಗೆ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.ಬಿಜೆಪಿ-ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಹೀಗಾಗಿ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ಸುಮಲತಾ ಅವರು ಮಂಡ್ಯ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಒಲ್ಲದ ಮನಸ್ಸಿನಿಂದನೇ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಇದೀಗ ಸುಮಲತಾ ಅವರನ್ನು ಮೇಲ್ಮನೆಗೆ ಕಳುಹಿಸಿಕೊಡುವ ಬಗ್ಗೆ ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ. ಜೂ.13 ರಂದು ನಡೆಯಲಿರುವ ಚುನಾವಣೆಯಲ್ಲಿ ಒಟ್ಟು 11 ಸ್ಥಾನಗಳಿದ್ದು, ಅದರಲ್ಲಿ ಸಂಖ್ಯಾ ಬಲಾಬಲದ ಮೇಲೆ ಕಾಂಗ್ರೆಸ್‌ಗೆ 7 ಸ್ಥಾನ, ಬಿಜೆಪಿಗೆ 3 ಸ್ಥಾನ ಹಾಗೂ ಜೆಡಿಎಸ್‌ಗೆ 1 ಸ್ಥಾನ ಲಭಿಸಲಿದೆ. ಬಿಜೆಪಿ ಲಭಿಸುವ ಮೂರು ಸ್ಥಾನಗಳ ಪೈಕಿ ಸುಮಲತಾ ಅವರಿಗೆ ಮಹಿಳಾ ಕೋಟಾದಡಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಅಲ್ಲದೇ, ಮಹಿಳಾ ಕೋಟಾದ ಜತೆಗೆ ಪಕ್ಷಕ್ಕಾಗಿ ಕ್ಷೇತ್ರ ತ್ಯಾಗ ಮಾಡಿದ ಮಾನದಂಡದ ಆಧಾರದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರು ಸುಮಲತಾ ಅವರಿಗೆ ಅವಕಾಶ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.