ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯದಲ್ಲಿ ಉಂಟಾಗಿರುವ ಯೂರಿಯಾ ಅಭಾವ ಹಾಗೂ ಅಸಮರ್ಪಕ ಯೂರಿಯಾ ವಿತರಣೆ ಖಂಡಿಸಿ ರಾಜ್ಯದ ಹಲವೆಡೆ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಹಾಸನ, ಬೀದರ್, ಬೆಳಗಾವಿ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ವಿವಿಧೆಡೆ ಬಿಜೆಪಿ ಹೋರಾಟ ನಡೆಸಿತು.ಹಾಸನದಲ್ಲಿ ಬೇಲೂರು ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ ಮತ್ತು ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ರೈತ ಮೋರ್ಚಾದ ವತಿಯಿಂದ ಮಾನವ ಸರಪಳಿ ನಿರ್ಮಿಸಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರ ಕಾರ್ಯಾಲಯದ ಮುಂದೆ ಪ್ರತಿಭಟಿಸಲಾಯಿತು. ಕೇಂದ್ರ ಸರಕಾರ ನೀಡಿರುವ ರಸಗೊಬ್ಬರವನ್ನು ರೈತರಿಗೆ ಸರಿಯಾಗಿ ಹಂಚಿಕೆ ಮಾಡದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಹಾಗೂ ಸರ್ಕಾರದ ಅವೈಜ್ಞಾನಿಕ ದಾಸ್ತಾನು ಖಂಡಿಸಿ ಬೀದರ್ ಜಿಲ್ಲೆಯ ವಿವಿಧೆಡೆ ಬಿಜೆಪಿಯಿಂದ ರಸ್ತೆ ತಡೆ ನಡೆಸಲಾಯಿತು. ಬೀದರ್ ಕ್ಷೇತ್ರದ ಜನವಾಡಾ ಗ್ರಾಮದ ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೃಷಿ ಸಚಿವ ಚಲುವರಾಯ ಸ್ವಾಮಿ ಹಾಗೂ ಎಪಿಎಂಸಿ ಸಚಿವ ಶಿವಾನಂದ ಪಾಟೀಲ್ ಅವರು ಮಾಧ್ಯಮಗಳಲ್ಲಿ ಒಬ್ಬರಿಗೊಬ್ಬರು ತಾಳಮೇಳವಿಲ್ಲದಂತೆ ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ. ಇದರಿಂದಾಗಿ ರೈತರಲ್ಲಿ ಗೊಂದಲ ಮೂಡಿದೆ. ಕಾಳಸಂತೆಕೋರರಿಗೆ ಕಡಿವಾಣ ಹಾಕುವ ಬದಲು, ಅವರನ್ನು ಪ್ರೋತ್ಸಾಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.ಮಾಜಿ ಶಾಸಕ ಪ್ರಕಾಶ ಖಂಡ್ರೆ ನೇತೃತ್ವದಲ್ಲಿ ಭಾಲ್ಕಿ ಪಟ್ಟಣದ ಅಂಬೇಡ್ಕರ್ ವೃತ್ತದ ಹತ್ತಿರ ಜಮಾಯಿಸಿದ ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬೆಳಗಾವಿಯಲ್ಲಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ನಗರದ ಕಿತ್ತೂರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಲಕ್ಷಾಂತರ ಮೆಟ್ರಿಕ್ ಟನ್ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಆದರೂ, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಿಡಿ ಕಾರಿದರು.ಬಾಗಲಕೋಟೆಯಲ್ಲಿ ಡಾ। ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ, ಲಕ್ಷ್ಮೇಶ್ವರ, ಕೊಪ್ಪಳಗಳಲ್ಲಿಯೂ ಪ್ರತಿಭಟನೆಗಳು ನಡೆದವು.ರೈತರ ಪರದಾಟ:
ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತ ಪರದಾಟ ಮುಂದುವರೆದಿದ್ದು, ಬುಧವಾರವೂ ಗದಗ ಹಾಗೂ ದಾವಣಗೆರೆಯಲ್ಲಿ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ರಣತೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪೊಲೀಸರ ಕಾವಲಿನಲ್ಲಿ ಸ್ವತಃ ಬಿಜೆಪಿ ಶಾಸಕ ಡಾ। ಚಂದ್ರು ಲಮಾಣಿ ಅವರು ರೈತರಿಗೆ ಯೂರಿಯಾ ಗೊಬ್ಬರ ವಿತರಿಸಿದರು. ಬುಧವಾರ ನೂರಾರು ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರಿಂದ ಪೊಲೀಸ್ ಭದ್ರತೆ ನೀಡಲಾಗಿತ್ತು. ಇನ್ನೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಚನ್ನಗಿರಿಯಲ್ಲಿ ಪ್ರತಿಭಟನೆ ನಡೆಸಿದ ನೂರಾರು ರೈತರು, ಯೂರಿಯಾ ಗೊಬ್ಬರದ ಕೃತಕ ಅಭಾವವನ್ನು ಖಂಡಿಸಿದರು.ಕೃಷಿಯಾಧಾರಿತ ರೈತರು ಹಾಕಿರುವ ಮೆಕ್ಕೆಜೋಳ ಬೆಳೆ ಪ್ರಸ್ತುತ ಉತ್ತಮವಾಗಿದ್ದು, ಈ ಸಮಯದಲ್ಲಿ ಪೂರಕವಾಗುವಂತೆ ಗೊಬ್ಬರ ಕೊಡಬೇಕಾಗಿದೆ. ಆದರೆ ಗೊಬ್ಬರದ ಅಭಾವದಿಂದ ಬೆಳೆಯ ಬೆಳವಣಿಗೆಯಲ್ಲಿ ಕುಂಠಿತವಾಗುತ್ತಿದೆ. ಯೂರಿಯಾ ಒದಗಿಸದೆ ರೈತರಿಗೆ ಅನ್ಯಾಯ ಮಾಡುತ್ತೀರುವುದು ಸರಿಯಲ್ಲ ಎಂದು ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ರಸಗೊಬ್ಬರಕ್ಕಾಗಿ ಇಂದು ಜಿಲ್ಲೆ ಕೇಂದ್ರಗಳಲ್ಲಿ ಜೆಡಿಎಸ್ ಧರಣಿ:ರಾಜ್ಯದಲ್ಲಿ ಉಂಟಾಗಿರುವ ರಸಗೊಬ್ಬರ ಅಭಾವವನ್ನು ಶೀಘ್ರ ಬಗೆಹರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇದ್ದರೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ರಸಗೊಬ್ಬರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿಲ್ಲ. ಕೇಂದ್ರ ಸರ್ಕಾರ ರಸಗೊಬ್ಬರ ನೀಡಿಲ್ಲ ಎಂದು ಪತ್ರ ಬರೆದು ಕುಳಿತರೆ ಆಗುವುದಿಲ್ಲ. ಕೇಂದ್ರದ ಕಡೆ ಬೊಟ್ಟು ಮಾಡಿದರೆ ಸಮಸ್ಯೆ ಪರಿಹಾರ ಕಾಣುವುದಿಲ್ಲ ಎಂದು ಕಿಡಿಕಾರಿದರು.ರಾಜ್ಯದಲ್ಲಿ ಯೂರಿಯಾ ಮತ್ತು ಡಿಎಪಿ ರಸಗೊಬ್ಬರದ ಅಭಾವ ತೀವ್ರವಾಗಿದೆ. ನೀರಾವರಿ ಪ್ರದೇಶದಲ್ಲಿ ಶೇ.80 ರಷ್ಟು ಭತ್ತ ನಾಟಿಯಾಗಿದೆ. ಹೀಗಾಗಿ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ 6.8 ಲಕ್ಷ ಟನ್ ರಸಗೊಬ್ಬರವನ್ನು ರಾಜ್ಯಕ್ಕೆ ಕಳುಹಿಸಲಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ, 5.27 ಲಕ್ಷ ಟನ್ ಮಾತ್ರ ಕೇಂದ್ರ ಸರ್ಕಾರ ನೀಡಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಇದರಿಂದ ಗೊಂದಲ ಉಂಟಾಗಿದೆ. ಕಾಳಸಂತೆಯಲ್ಲಿ ರಸಗೊಬ್ಬರ ದುಬಾರಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ರಾಜ್ಯದಲ್ಲಿ 5.32 ಲಕ್ಷ ಟನ್ ಕೊರತೆ:
ರಾಜ್ಯದಲ್ಲಿ 5.32 ಲಕ್ಷ ಟನ್ ರಸಗೊಬ್ಬರದ ಕೊರತೆ ಉಂಟಾಗಿದೆ. ಮತ್ತೊಂದೆಡೆ ನೆರೆಹಾವಳಿಯಿಂದ ಬೆಳೆ ಹಾನಿಗೀಡಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲಿಸಿಲ್ಲ. ಪರಿಹಾರವನ್ನೂ ಕೊಟ್ಟಿಲ್ಲ. ರಸಗೊಬ್ಬರದ ಅಭಾವವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿಂದೆ ರಾಜ್ಯದಲ್ಲಿ ರಸಗೊಬ್ಬರದ ಅಭಾವದ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಗೋಲಿಬಾರ್ ಆಗಿತ್ತು. ಹೀಗಾಗಿ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಅಂತೆಯೆ ತುಂಗಭದ್ರಾ ಜಲಾಶಯದಲ್ಲಿ ಹಾನಿಗೀಡಾಗಿದ್ದ ಒಂದು ಗೇಟನ್ನೂ ಸಹ ಸರಿಪಡಿಸಿಲ್ಲ. ಹೀಗಾಗಿ ಜಲಾಶಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ನೀರು ನಿಲ್ಲಿಸಲಾಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹ:
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಉಂಟಾದ ಬೆಳೆ ನಷ್ಟಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು. ಕೇಂದ್ರ ಸರ್ಕಾರದ ಸಂಬಂಧಪಟ್ಟ ಸಚಿವರೊಂದಿಗೆ ರಸಗೊಬ್ಬರದ ಸಮಸ್ಯೆ ಬಗ್ಗೆ ಸಮಾಲೋಚಿಸಿ ಅಗತ್ಯವಿರುವ ರಸಗೊಬ್ಬರವನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ರಾಜ್ಯಸರ್ಕಾರ ಹಾಗೂ ರಾಜ್ಯಪಾಲರಿಗೂ ನಾವು ಮನವಿ ಮಾಡುತ್ತೇವೆ ಎಂದು ಹೇಳಿದರು. ಮಾಜಿ ಸಚಿವ ಅಲ್ಕೋಡ್ ಹನುಮಂತಪ್ಪ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.