ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿ ಆಕ್ರೋಶಕನ್ನಡಪ್ರಭ ವಾರ್ತೆ ಗದಗ
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು, ಪ್ರಗತಿಪರ ಚಿಂತಕರು ಹಾಗೂ ಬಸವಪರ ಸಂಘಟನೆಗಳ ಸಹಯೋಗದಲ್ಲಿ ನೂರಾರು ಬಸವತತ್ವ ಪ್ರಚಾರಕರು ಮತ್ತು ಅಭಿಮಾನಿಗಳು ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.
ಬಸವ ಮಂಟಪ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹಾಗೂ ಆಧಾರರಹಿತ ವಿಚಾರಗಳನ್ನು ಪ್ರಕಟಿಸಲಾಗಿದೆ. ಪುಸ್ತಕದ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಪುಸ್ತಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಸವಣ್ಣನವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಚಾರಗಳನ್ನು ಹರಡುತ್ತಿರುವವರನ್ನು ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭ ಮಾತನಾಡಿದ ತೋಂಟದ ಸಿದ್ಧರಾಮ ಸ್ವಾಮೀಜಿ, ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಮತ್ತು ದಾಸೋಹದ ಮಹತ್ವವನ್ನು ಜಗತ್ತಿಗೆ ಸಾರಿದ ವಿಶ್ವಗುರುಗಳು. ಜಾತಿ, ಮತ, ವರ್ಣ ಹಾಗೂ ಲಿಂಗಭೇದಗಳನ್ನು ವಿರೋಧಿಸಿ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚೇತನದ ಚರಿತ್ರೆಯನ್ನು ತಿರುಚುವ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತರುವ ಪ್ರಯತ್ನಗಳು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಸ್.ಎಸ್. ಪಾಟೀಲ, ಸಾಹಿತಿ ಚಂದ್ರಶೇಖರ ವಸ್ತ್ರದ, ಬಸವರಾಜ ಸೂಳಿಭಾವಿ, ಶೇಖಣ್ಣ ಕವಳಿಕಾಯಿ, ಎಸ್.ಎನ್. ಬಳ್ಳಾರಿ, ವಿವೇಕಾನಂದಗೌಡ ಪಾಟೀಲ, ಎಸ್.ಎಸ್. ಪಟ್ಟಣಶೆಟ್ಟರ್ ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು, ಪ್ರಗತಿಪರ ಚಿಂತಕರು, ಬಸವಪರ ಸಂಘಟನೆಗಳ ಪದಾಧಿಕಾರಿಗಳು, ಲಿಂಗಾಯತ ಸಮಾಜದ ಮುಖಂಡರು, ಮಹಿಳೆಯರು ಪಾಲ್ಗೊಂಡಿದ್ದರು.