ಗದಗ: ರಾಜ್ಯದಲ್ಲಿ ಮಳೆ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಸವಾಲಾಗಿ ಪರಿಣಮಿಸಿರುವ ಹಿನ್ನೆಲೆ ಕೆರೆ, ಜಲಾಶಯ ಹಾಗೂ ಡ್ಯಾಂಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕೇವಲ ಕುಡಿಯುವ ನೀರು ಮತ್ತು ಜನಜೀವನಕ್ಕೆ ಅಗತ್ಯವಾದ ದೈನಂದಿನ ಬಳಕೆಗಳಿಗೆ ಮಾತ್ರ ಮೀಸಲಿಡಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ತಿಳಿಸಿದರು.
ರಾಜ್ಯ ಸರ್ಕಾರದ ಆದ್ಯತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿರುವ ಎಲ್ಲ ಕೆರೆ, ಡ್ಯಾಂ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಉದ್ದೇಶಕ್ಕೆ ಮೀಸಲಾದ ನೀರನ್ನು ಬೇರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡಬಾರದು ಎಂದರು.
ಕೆರೆ ಹಾಗೂ ಜಲಾಶಯಗಳಿಂದ ಅನಧಿಕೃತವಾಗಿ ನೀರು ಎತ್ತುತ್ತಿರುವ ಪಂಪ್‌ಸೆಟ್‌ಗಳನ್ನು ತಕ್ಷಣವೇ ತೆರವುಗೊಳಿಸಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಯಾವುದೇ ಭಾಗದಲ್ಲಿ ಲಿಫ್ಟ್ ಇರಿಗೇಶನ್‌ಗೆ ಜಿಲ್ಲಾಧಿಕಾರಿ ಅನುಮತಿ ನೀಡಬಾರದು. ಸರ್ಕಾರದ ಆದೇಶವನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.ಕೆರೆ ತುಂಬಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸುವ ಇಲಾಖೆಗಳು ನೀರಿನ ಬಳಕೆಯಲ್ಲಿ ಯಾವುದೇ ರೀತಿಯ ದುರುಪಯೋಗ ನಡೆಯದಂತೆ ನಿರಂತರ ನಿಗಾ ವಹಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉತ್ತಮ ಹಾಗೂ ನಿರಂತರ ಮಳೆಯಾದಲ್ಲಿ ನೀರಿನ ಸಂಗ್ರಹ ಪರಿಸ್ಥಿತಿಯನ್ನು ಮರುಪರಿಶೀಲಿಸಿ, ಅಗತ್ಯವಿದ್ದಲ್ಲಿ ಸರ್ಕಾರ ತನ್ನ ಆದೇಶವನ್ನು ಪರಿಷ್ಕರಿಸಲಿದೆ. ಆದರೆ ಅಷ್ಟರ ವರೆಗೆ ಈಗ ಜಾರಿಯಲ್ಲಿರುವ ಎಲ್ಲ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಲಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕಂದಾಯ ಸೇರಿದಂತೆ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸರ್ಕಾರದ ನಿರ್ದೇಶನಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಚರ್ಚಿಸಿದರು.