ಸೊರಬ: ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನಗಳನ್ನು ಶಿಕ್ಷಣಕ್ಕೆ ಪೂರಕವಾಗಿ ಬಳಕೆ ಮಾಡಿಕೊಳ್ಳಬೇಕೆ ಹೊರತು ಸಾಮಾಜಿಕ ಜಾಲತಾಣಗಳಲ್ಲಿ ಅನಗತ್ಯವಾಗಿ ಸಮಯ ಕಳೆಯುವುದರಿಂದ ಭವಿಷ್ಯದಲ್ಲಿ ಮಾರಕವಾಗುತ್ತದೆ ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
ಬುಧವಾರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಎಸ್ಸಿ ಮತ್ತು ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಾಲತಾಣಗಳಲ್ಲಿ ಪ್ರಕಟವಾಗುವ ಸುಳ್ಳು ಮಾಹಿತಿಗಳನ್ನು ಮತ್ತೊಬ್ಬರೊಂದಿಗೆ ಹಂಚಿಕೊಳ್ಳಬಾರದು. ಜೊತೆಗೆ ಅಪರಿಚಿತರೊಂದಿಗೆ ಸ್ನೇಹ ಬೆಳೆಸುವುದು ಸಮಸ್ಯೆಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಇದರ ಬದಲು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇದರಿಂದ ಜ್ಞಾನ ಮಟ್ಟದ ವೃದ್ಧಿಯಾಗುತ್ತದೆ ಮತ್ತು ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿಲು ಸಾಧ್ಯವಾಗುತ್ತದೆ ಎಂದರು. ಬಾಲ್ಯ ವಿವಾಹವು ಸಮಾಜಕ್ಕೆ ಗಂಡಾತರವಾಗಿದ್ದು, ಈ ನಿಟ್ಟಿನಲ್ಲಿ ಕಾನೂನಿನಲ್ಲಿಯೂ ಬಾಲ್ಯ ವಿವಾಹ ತಡೆಗೆ ವಿಶೇಷ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಪ್ರತಿಯೊಬ್ಬರೂ ಕಾನೂನಿನ ಬಗ್ಗೆ ಮಾಹಿತಿ ಹೊಂದಿದಾಗ ಮಾತ್ರ ಇಂತಹ ಘಟನೆಗಳನ್ನು ತಡೆಗಟ್ಟಲು ಸಾಧ್ಯ ಎಂದರು.ಕಾಲೇಜಿನ ಪ್ರಾಂಶುಪಾಲ ಎಚ್.ಎಂ.ಸುರೇಶಪ್ಪ ಅಧ್ಯಕ್ಷತೆ ವಹಿಸಿದ್ದರು.
ಸೊರಬ ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ರಾಜು ಕೆ.ಶೇಡಬಾಳಕರ್, ಬಿಇಒ ಆರ್.ಪುಷ್ಪಾ, ಸಿಪಿಐ ಎಲ್.ರಾಜಶೇಖರ್, ವಕೀಲರ ಸಂಘದ ಅಧ್ಯಕ್ಷ ಸಿ.ವೈ.ಅಶೋಕ್, ಸದಸ್ಯೆ ಮಂಜುಳಾ, ಉಪನ್ಯಾಸಕರಾದ ವಿಜಯಕುಮಾರ್ ದಟ್ಟೇರ್, ಚಿದಾನಂದಪ್ಪ, ಸಂಗೀತಾ ಮತ್ತಿತರರಿದ್ದರು. .