ಕನ್ನಡಪ್ರಭ ವಾರ್ತೆ ಮಂಡ್ಯ
ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ತಾಲೂಕಿನ ವಿ.ಸಿ.ಫಾರಂನಲ್ಲಿ ಆಯೋಜಿಸಿದ್ದ ಕೃಷಿ ಯಂತ್ರೋಪಕರಣ ಮತ್ತು ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ ಮೇಳ ಉದ್ಘಾಟಿಸಿ ಮಾತನಾಡಿದರು.
ಅಭಿವೃದ್ಧಿ ಹೊಂದಿದ ಪಶ್ಚಿಮ ರಾಷ್ಟ್ರಗಳಲ್ಲಿ ಕೃಷಿಯಲ್ಲಿ ಶೇ.80 ರಿಂದ 90ರಷ್ಟು ಯಂತ್ರೋಪಕರಣಗಳನ್ನು ಬಳಸುತ್ತಿದ್ದಾರೆ. ನಮ್ಮ ದೇಶದ ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಸುಮಾರು ಶೇ.40 ರಿಂದ 50ರಷ್ಟು ಯಾಂತ್ರೀಕರಣ ಬಳಕೆಯಲ್ಲಿದೆ. ಕರ್ನಾಟಕದಲ್ಲೂ ಯಾಂತ್ರಿಕೃತ ಕೃಷಿ ಪದ್ಧತಿ ಹೆಚ್ಚಾಗಬೇಕಿದೆ ಎಂದು ನುಡಿದರು.ಇಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಕರ್ನಾಟಕದಲ್ಲಿ ಹೆಚ್ಚುತ್ತಿದೆ. ಹಾಗಾಗಿ ಕೃಷಿ ಯಾಂತ್ರೀಕರಣ ಅತ್ಯಂತ ಅಗತ್ಯವಾಗಿದೆ. ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಿಕೊಳ್ಳಬೇಕು. ಇದರೊಂದಿಗೆ ಕೃಷಿ ಯಂತ್ರೋಪಕರಣಗಳ ದುರಸ್ತಿ ವಿಧಾನಗಳು ಹಾಗೂ ಸುರಕ್ಷಿತ ಬಳಕೆ ಕುರಿತು ತರಬೇತಿ ನೀಡುವ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಮುಂದಿನ ವರ್ಷಗಳಲ್ಲಿ ಆರಂಭಿಸಲು ಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳ ಸಂಪನ್ಮೂಲ ವ್ಯಕ್ತಿಗಳು ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆ, ಅವುಗಳ ನಿರ್ವಹಣೆ, ಕಾರ್ಯಕ್ಷಮತೆ ಮತ್ತು ಉತ್ಪಾದಕತೆ ಹೆಚ್ಚಿಸುವಲ್ಲಿ ಅವುಗಳ ಪಾತ್ರದ ಬಗ್ಗೆ ವಿವರವಾದ ಮಾಹಿತಿ ನೀಡಿದರು.
ವಿಸ್ತರಣಾ ನಿರ್ದೇಶಕ ಡಾ.ಸಿ.ರಾಮಚಂದ್ರ ಮಾತನಾಡಿ, ರೈತರಿಗೆ ಕೈಗೆಟಿಕುವ ದರದಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ ಬಳಕೆ ಕುರಿತು ವಿಶ್ವ ವಿದ್ಯಾಲಯದಿಂದ ಹೆಚ್ಚಿನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಈ ಕಾರ್ಯಕ್ರಮದಲ್ಲಿ ಸುಮಾರು 500 ಕ್ಕೂ ಹೆಚ್ಚು ರೈತರು ಭಾಗವಹಿಸಿ ವಿವಿಧ ಕೃಷಿ ಯಂತ್ರೋಪಕರಣಗಳ ಬಗ್ಗೆ ಮಾಹಿತಿ ಪಡೆದುಕೊಂಡರು.