ಕನ್ನಡಪ್ರಭ ವಾರ್ತೆ ಮಂಡ್ಯ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಬಜೆಟ್ ನಲ್ಲಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಖಂಡಿಸಿ ಜುಲೈ 29 ರಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗಾಗಿ ದುರ್ಬಳಕೆ ಮಾಡಿಕೊಂಡು ಪರಿಶಿಷ್ಟರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದಲ್ಲಿ ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಸೇರಿ ಹಲವು ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಜುಲೈ 29ರಂದು ಆಗಮಿಸುವ ವೇಳೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಣ ದುರ್ಬಳಕೆ ಬಗ್ಗೆ ದಲಿತ ಸಂಘಟನೆಗಳು ಹೋರಾಟ ನಡೆಸುವಂತೆ ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿ. ಆನಂದ್, ಮರಂಕಯ್ಯ, ಸುರೇಶ್ ಕುಮಾರ್ ಇದ್ದರು.ಆ.15ರಂದು ಬುದ್ಧನ ಪ್ರತಿಮೆ ಅನಾವರಣ, ಬೈಕ್ ಜಾಥಾಕನ್ನಡಪ್ರಭ ವಾರ್ತೆ ಮಂಡ್ಯಬುದ್ಧ ಭಾರತ ಫೌಂಡೇಷನ್‌ನಿಂದ ಆ.15ರಂದು ಬುದ್ಧನ ಪ್ರತಿಮೆ ಅನಾವರಣ ಮತ್ತು ಬೈಕ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಫೌಂಡೇಷನ್ ಅಧ್ಯಕ್ಷ ಜೆ.ರಾಮಯ್ಯ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಗೌತಮ ಬುದ್ಧನ ಪ್ರತಿಮೆಯನ್ನು ತೆರೆದ ರಥದಲ್ಲಿ ಕೂರಿಸಿ ಪುಷ್ಪಾರ್ಚನ ಮಾಡಲಾಗುವುದು. ಮಂಡ್ಯದಿಂದ ನೇರಳೆಕೆರೆಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಪ್ರತಿಷ್ಠಾಪಿಸಲಾಗುವುದು ಎಂದರು.ಗೌತಮ ಬುದ್ಧರ ರಥಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡುವರು. ಶಾಸಕ ಪಿ.ರವಿಕುಮಾರ ಅಧ್ಯಕ್ಷತೆ ವಹಿಸುವರು. ಕೊಳ್ಳೇಗಾಲ ಬುದ್ಧವಿಹಾರದ ಮನೋರಕ್ಕಿತ ಭಂತೇಜಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ನಿವೃತ್ತ ಎಡಿಜಿಪಿ ಡಾ.ಸುಭಾಷ್ ಭರಣಿ, ಪ್ರೊ.ಮಹೇಶ್‌ಚಂದ್ರಗುರು, ಪ್ರೊ.ಕೆ.ಎಸ್.ಭಗವಾನ್, ಡಾ.ಸುರೇಂದ್ರ, ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ನಳಂದ ಬೌದ್ಧ ವಿಶ್ವವಿದ್ಯಾಲಯದ ಬೋಧಿದತ್ತ ಥೇರಾ ಸೇರಿದಂತೆ ಇತರರು ಭಾಗವಹಿಸುವರು ಎಂದರು.ಸುದ್ದಿಗೋಷ್ಠಿಯಲ್ಲಿ ಧಮ್ಮ ವೀರಪ್ಪ, ಸುರೇಶ್ ಕಂಠಿ, ಗಂಗರಾಜು, ಥಾಮಸ್ ಬೆಂಜಮಿನ್ ಇತರರಿದ್ದರು.