ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾ ಪಂಚಾಯತಿಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ತಾಯಿ ಸ್ವರೂಪಿ ಅದು ನಮ್ಮನ್ನು ರಕ್ಷಿಸುತ್ತದೆ. ಪ್ರಕೃತಿಯು ನಮಗೆ ಉಚಿತವಾಗಿ ಗಾಳಿ, ಬೆಳಕು, ನೀರು, ಆಹಾರ ಒದಗಿಸಿ ಸಲುಹುತ್ತದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿಯ ಮೂಲಕ ಅರಣ್ಯೀಕರಣ ಯೋಜನೆ ಮಾಡಿಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಪರಿಸರ ಸಂರಕ್ಷಣೆ ಬಹಳ ಪ್ರಮುಖವಾದದ್ದು ಮತ್ತು ಅದು ನಮ್ಮೆಲ್ಲರ ಜವಾಬ್ದಾರಿಯೂ ಸಹ ಆಗಿದೆ. ಜಗತ್ತಿನಲ್ಲಿ ಪ್ರಸ್ತುತ ಬದಲಾವಣೆಯ ಆಧುನೀಕರಣದಿಂದ ಪರಿಸರ ನಶಿಸದಂತೆ ಕಾಪಾಡಿಕೊಳ್ಳಬೇಕಾಗಿರುವುದು ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.
ಮಾನವ ಸಂಕುಲದ ಬದುಕುಳಿಯುವಿಕೆಗೆ ಅವಶ್ಯವಿರುವ ಮೂಲಭೂತ ಅವಶ್ಯಕತೆಗಳನ್ನು ಪರಿಸರ ನಿತ್ಯ ನಮಗೆ ಒದಗಿಸುತ್ತದೆ. ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಪರಿಸರವನ್ನು ರಕ್ಷಿಸುವ ಕಾಯಕದಲ್ಲಿ ಇಂದಿನಿಂದಲೇ ನಾವೆಲ್ಲ ತೊಡಗಬೇಕು. ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ, ಅರಣ್ಯನಾಶ ಮತ್ತು ಜೀವವೈವಿಧ್ಯದ ನಷ್ಟದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಈ ವಿಶೇಷ ದಿನವನ್ನು ಆಚರಿಸಲು ನಾವು ಸಜ್ಜಾಗುತ್ತಿರುವಾಗ, ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಯೋಗಕ್ಷೇಮದಲ್ಲಿ ನಾವು ಇರುವ ಪರಿಸರವು ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ ಮತ್ತು ಎಲ್ಲವನ್ನೂ ಸಂರಕ್ಷಿಸುವುದು ಮತ್ತು ನಿಯಂತ್ರಣದಲ್ಲಿಟ್ಟುಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ತಿಳಿಸಿದರು.ಪ್ರಕೃತಿ ಸಂಪನ್ಮೂಲವನ್ನು ನಮಗೆ ಅವಶ್ಯಕತೆ ಇದ್ದಷ್ಟು ಮಾತ್ರ ಉಪಯೋಗಿಸಿಕೊಳ್ಳೋಣ, ಅವಶ್ಯಕತೆಗಿಂತ ಹೆಚ್ಚು ಉಪಯೋಗ ಮಾಡದೇ ನಮ್ಮ ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ.ಬಿ.ಅಲ್ಲಾಪೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಬಿ.ಎಸ್.ಕುಂಬಾರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಮುಂತಾದವರು ಇದ್ದರು.