ಉತ್ತರ ಕನ್ನಡ: ದ್ವಿತೀಯ ಪಿಯುಸಿ ಪರೀಕ್ಷೆಗೆ 14,401 ವಿದ್ಯಾರ್ಥಿಗಳು

KannadaprabhaNewsNetwork |  
Published : Feb 28, 2024, 02:37 AM IST
ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು | Kannada Prabha

ಸಾರಾಂಶ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.

ಕಾರವಾರ:

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಎಲ್ಲ ಪರೀಕ್ಷೆಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು ಅಗತ್ಯವಿರುವ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ರೆಗ್ಯೂಲರ್ , ಖಾಸಗಿ ಮತ್ತು ಪುನಾರಾವರ್ತಿತ ಸೇರಿದಂತೆ 14,401 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಲ್ಲ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಹೇಳಿದರು.ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿ ಮತ್ತು ಸಿಬ್ಬಂದಿ, ಸ್ಮಾರ್ಟ್‌ವಾಚ್, ಮೊಬೈಲ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ವಸ್ತು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾಹಿತಿ ನೀಡುವಂತೆ ಮತ್ತು ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನವೇ ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸುವಂತೆ ಸೂಚನೆ ನೀಡಿದರು.ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸಮಸ್ಯೆಗಳಾಗದಂತೆ ಸೂಕ್ತ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಆರೋಗ್ಯ ಸಿಬ್ಬಂದಿ ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರಿಗೆ ಗಂಗೂಬಾಯಿ ಮಾನಕರ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಪಡೆಯುವಂತೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳು ತಲುಪುವುಂತೆ ಅಗತ್ಯವಿರುವ ವಾಹನಗಳ ವ್ಯವಸ್ಥೆ, ಮಾರ್ಗಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಪ್ರದೇಶವನ್ನು ಸೆಕ್ಷನ್ 144ರಂತೆ ನಿಷೇದಾಜ್ಞೆ ವಿಧಿಸುವ ಜತೆಗೆ ಸುತ್ತಲಿನ ಝೇರಾಕ್ಸ್ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಸೂಚನೆ ನೀಡಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ್ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿಗಳು ಇದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌