- ನೆರಳಿನಲ್ಲಿಯೇ ಕಟ್ಟಿ ರಕ್ಷಿಸಬೇಕು । ಹಾಲು ಇಳುವರಿ ಸಂರಕ್ಷಣೆಗೆ ಅಗತ್ಯ ಸಲಹೆ ಪಾಲಿಸಲು ಸಲಹೆ
ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವು ಏಪ್ರಿಲ್ 1 ಆರಂಭವಾಗಿದ್ದು 30ರವರೆಗೆ ನಡೆಯಲಿದೆ. ಎಲ್ಲ ಜಾನುವಾರುಗಳಿಗೆ ಕಾಲುಬಾಯಿ ಜ್ವರದ ವಿರುದ್ಧ ಲಸಿಕೆ ಹಾಕಿಸಬೇಕು ಎಂದು ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಚಂದ್ರಶೇಖರ್ ಸುಂಕದ್ ತಿಳಿಸಿದ್ದಾರೆ.
ಈ ವರ್ಷ ಬಿಸಿಲಿನ ತಾಪ ಹೆಚ್ಚಾಗಿ ಇರುವುದರಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆ ಹಾಗೂ ಹಾಲಿನ ಇಳುವರಿ ಕಾಪಾಡಲು ಅನುಕೂಲವಾಗುತ್ತದೆ ಎಂದೂ ಸಹ ತಿಳಿಸಿದ್ದಾರೆ.ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಮೇಯಿಸಲು ಬಿಡಬೇಕು, ದಿನಕ್ಕೆ 2 ರಿಂದ 3 ಸಲ ಶುದ್ಧ ನೀರನ್ನು ಕುಡಿಸಬೇಕು. ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಅಥವಾ ಗಿಡದ ನೆರಳಿನಲ್ಲಿ ಕಟ್ಟಬೇಕು. ದಿನದಲ್ಲಿ 1 ರಿಂದ 2 ಸಾರಿ ಮೈ ತೊಳೆಯಬೇಕು. ಹಾಗೂ ಮಿಶ್ರ ತಳಿ ರಾಸು, ಎಮ್ಮೆಗಳಲ್ಲಿ ದೇಹದ ಉಷ್ಣತೆ ಕಾಪಾಡಲು ಗೋಣಿಚೀಲಗಳನ್ನು ನೀರಲ್ಲಿ ತೋಯಿಸಿ ಮೈಮೇಲೆ ಹಾಕಬೇಕು. ದನದ ಕೊಟ್ಟಿಗೆಯನ್ನು ತಂಪಾಗಿ ಇಡಲು ಕೊಟ್ಟಿಗೆಯ ಮೇಲೆ ತೆಂಗಿನ ಗರಿ, ಹುಲ್ಲನ್ನು ಹಾಕಿ, ಕಿಟಕಿಗಳಿಗೆ ಗೋಣಿಚೀಲಗಳನ್ನು ಕಟ್ಟಿ ನೀರನ್ನು ಸಿಂಪಡಿಸುತ್ತಿರಬೇಕು. ಜಮೀನು ಉಳುಮೆ ಮಾಡಲು ಎತ್ತುಗಳನ್ನು ಮುಂಜಾನೆ ಅಥವಾ ಸಂಜೆ ಮಾತ್ರ ಕೆಲಸಕ್ಕೆ ಉಪಯೋಗಿಸಬೇಕು.
ಹೈನು ರಾಸುಗಳಿಗೆ ಸಾಧ್ಯವಾದಷ್ಟು ಪೌಷ್ಠಿಕ ಆಹಾರ ಹಾಗೂ ಲಭ್ಯವಿರುವ ಹಸಿರು ಮೇವನ್ನು ಕೊಡಬೇಕು. ಪೌಷ್ಠಿಕ ಆಹಾರ ಅಥವಾ ಕುಡಿಯುವ ನೀರಿನಲ್ಲಿ ಲವಣ ಮಿಶ್ರಣ, ಉಪ್ಪು ಹಾಗೂ ಬೆಲ್ಲವನ್ನು ನಿಗದಿತ ಪ್ರಮಾಣದಲ್ಲಿ ನೀಡಬೇಕು. ಜಾನುವಾರುಗಳಿಗೆ ಮುಂಜಾಗ್ರತೆಯಾಗಿ ಇಲಾಖೆಯಿಂದ ಉಚಿತವಾಗಿ ನೀಡುವ ಸಾಂಕ್ರಾಮಿಕ ರೋಗಗಳ ಲಸಿಕೆಗಳನ್ನು ಕಾಲಕಾಲಕ್ಕೆ ನಿಗದಿತ ಸಮಯದಲ್ಲಿ ಹಾಕಿಸಬೇಕು. ಜಂತುನಾಶಕ ಔಷಧಿ ವರ್ಷಕ್ಕೆ 2 ರಿಂದ 3 ಸಾರಿ ಕುಡಿಸಬೇಕು. ಯಾವುದೇ ಸಮಯದಲ್ಲಿ ಕಾಯಿಲೆಯಿಂದ ಬಳಲುವ ಚಾನುವಾರುಗಳನ್ನು ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಚಿಕಿತ್ಸೆ ಕೊಡಿಸಬೇಕು.
ಬೇಸಿಗೆಯಲ್ಲಿ ಆಕಾಲಿನ ಮುಂಗಾರು ಮಳೆ ಜೊತೆಗೆ ಸಿಡಿಲಾಘಾತ ಆಗುವ ಸಂಭವ ಹೆಚ್ಚು. ಆದ್ದರಿಂದ ಜಾನುವಾರುಗಳ ಸಾವು-ನೋವು ತಪ್ಪಿಸಲು ರೈತರು ತಮ್ಮ ವೈಯಕ್ತಿಕ ಸುರಕ್ಷತೆ ಜೊತೆಗೆ ಜಾನುವಾರುಗಳನ್ನು ಯಾವುದೇ ಕಾರಣಕ್ಕೂ ಗಿಡ, ಮರಗಳ ಕೆಳಗೆ ನಿಲ್ಲಿಸಬಾರದು. ಎತ್ತರ ಪ್ರದೇಶದಲ್ಲಿ (ಗುಡ್ಡದಲ್ಲಿ) ಮೇಯಿಸುತ್ತಿದ್ದರೆ ತಕ್ಷಣ ತಗ್ಗು ಪ್ರದೇಶಕ್ಕೆ ಸ್ಥಳಾಂತರಿಸಬೇಕು.
- - - (-ಸಾಂದರ್ಭಿಕ ಚಿತ್ರ)