ಕನ್ನಡಪ್ರಭ ವಾರ್ತೆ ಕಲಬುರಗಿ
ಕೇಂದ್ರ ಪುರಸ್ಕೃತ ಯೋಜನೆಯಡಿ ಕಲಬುರಗಿ ಜಿಲ್ಲೆಯಾದ್ಯಂತ ಏ.1ರಿಂದ 30ರ ವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಅವಧಿಯಲ್ಲಿ ಇಲಾಖೆಯ ಪಶುವೈದ್ಯರು ಹಾಗೂ ಸಿಬ್ಬಂದಿ ಪ್ರತಿಯೊಂದು ಗ್ರಾಮದ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ‘ಕಾಲುಬಾಯಿ ರೋಗ ಲಸಿಕಾ ಅಭಿಯಾನ’ ಹಮ್ಮಿಕೊಳ್ಳುವ ಕುರಿತು ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಾನುವಾರು ಮಾಲೀಕರು ತಪ್ಪದೇ ತಮ್ಮ ದನ, ಎಮ್ಮೆ ಮತ್ತು ಹಂದಿ ಈ ಎಲ್ಲಾ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ಲಸಿಕೆ ಹಾಕಬೇಕು. ಅದೇ ರೀತಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಕೊಂಡು ಈ ಕಾರ್ಯಕ್ರವ ಯಶಸ್ವಿಗೊಳಿಸಲು ಪ್ರೋತ್ಸಾಹಿಸಬೇಕೆಂದರು.
ಕಾಲುಬಾಯಿ ರೋಗವು ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಲ್ಲಿ ಆರ್ಥಿಕತೆ ನಷ್ಟ ಉಂಟು ಮಾಡುವ ಮಾರಕ ರೋಗವಾಗಿದೆ. ರೋಗದಿಂದ ಗುಣಮುಖವಾದ ಜಾನುವಾರುಗಳಲ್ಲಿ ಗರ್ಭಕಟ್ಟುವಿಕೆಯಲ್ಲಿ ವಿಳಂಬ, ಸಾಮಥ್ರ್ಯ ನಷ್ಟ ಮತ್ತು ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆಯಿದ್ದು, ರೋಗದಿಂದ ಪೂರ್ಣ ಸುರಕ್ಷತೆಗಾಗಿ ಮೂರು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯಗತ್ಯವಾಗಿದೆ ಎಂದರು.ಸಭೆಯಲ್ಲಿ ಕಲಬುರಗಿ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ: ಎಸ್.ಡಿ.ಅವಟೆ, ಕಲಬುರಗಿ ಕೆ.ಎಂ.ಎಫ್. ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ. ವೈಜನಾಥ ಮಮ್ಮಾಣಿ ಹಾಗೂ ತಾಲ್ಲೂಕಿನ ಎಲ್ಲಾ ಮುಖ್ಯ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಪೋಸ್ಟರ್ ಬಿಡುಗಡೆ: ಇದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಕಾಲು ಮತ್ತು ಬಾಯಿ ಜ್ವರ ಸಾಮೂಹಿಕ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತು ಅರಿವು ಮೂಡಿಸುವ ಪೋಸ್ಟರ್‍ನ್ನು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಬಿಡುಗಡೆ ಮಾಡಿದರು.