ಗದಗ: ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸೋಣ. ಪೋಲಿಯೋ ರೋಗ ಮುಕ್ತ ಸಮಾಜ ನಿರ್ಮಿಸೋಣ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು. ಅವರು ಭಾನುವಾರ ನಗರದ ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಪೋಲಿಯೋ ಲಸಿಕಾ ಅಭಿಯಾನವನ್ನು ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡುವ ಮೂಲಕ ಚಾಲನೆ ನೀಡಿ ಮಾತಾಡಿದರು.
ಮಾರ್ಚ್ 3ರಿಂದ 6ರ ವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಗದಗ ಜಿಲ್ಲೆಯ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು. ಪೋಲಿಯೋ ಲಸಿಕೆಯನ್ನು ಹನಿಗಳ ರೂಪದಲ್ಲಿ ಉಚಿತವಾಗಿ 5 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ತಮ್ಮಸಮೀಪದ ಲಸಿಕಾ ಕೇಂದ್ರದಲ್ಲಿ ಪೋಲಿಯೋ ಹನಿ ಹಾಕಿಸಬೇಕು ಎಂದರು.ಜಿಲ್ಲೆಯಲ್ಲಿ 129327 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕುವ ಮೂಲಕ ಪೋಲಿಯೋ ಮುಕ್ತ ಕರ್ನಾಟಕವನ್ನಾಗಿಸಲು ಕೈಜೋಡಿಸೋಣ ಎಂದರು.
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪಾಲ್ಗೊಂಡು ಮಾತನಾಡಿದರು. ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಉಪನಿರ್ದೇಶಕ ಡಾ. ಶ್ರೀಧರ ಎಸ್.ಎಂ., ಡಿ.ಎಚ್.ಒ. ಡಾ. ಎಸ್.ಎಸ್. ನೀಲಗುಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಮೀನಾಕ್ಷಿ ಕೆ.ಎಸ್., ಡಿ.ಎಸ್.ಒ. ಡಾ.ವೆಂಕಟೇಶ ರಾಠೋಡ, ನಗರಸಭೆ ಸದಸ್ಯ ಪ್ರಕಾಶ ಅಂಗಡಿ, ಇನ್ನರ ವ್ಹೀಲ್ ಕ್ಲಬ್, ರೋಟರಿ ಕ್ಲಬ್ ಸದಸ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.