ಕನ್ನಡಪ್ರಭ ವಾರ್ತೆ ಬೆಂಗಳೂರು
ವಚನ ವಿಶ್ವವಿದ್ಯಾಲಯ ಸ್ಥಾಪಿಸುವ ಬೇಡಿಕೆಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಜತೆಗೆ ನಮ್ಮ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ನಾಮಕರಣ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಭಾನುವಾರ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ವಿಶ್ವಗುರು ಬಸವಣ್ಣ ಅವರನ್ನು ‘ಕರ್ನಾಟಕ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ವರ್ಷಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ನಮ್ಮೆ ಮೆಟ್ರೋಗೆ ‘ಬಸವ ಮೆಟ್ರೋ’ ಎಂದು ನಾಮಕರಣ ಮಾಡಬೇಕೆಂಬ ಬೇಡಿಕೆ ಇದೆ. ಇದು ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಯೋಜನೆಯಾಗಿದೆ. ನಮ್ಮ ಮೆಟ್ರೋ ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ ‘ಬಸವ ಮೆಟ್ರೋ’ ಎಂದು ಘೋಷಿಸಿ ಬಿಡುತ್ತಿದ್ದೆ. ಹಾಗಾಗಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇವೆ ಎಂದರು.ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ. ಚಲನೆ ಇಲ್ಲದ ಜಾತಿ ವ್ಯವಸ್ಥೆ ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು. ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದು ಹೇಳಿದರು.
ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು. ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.ಈ ಅಸಮಾನತೆ ಹೋಗದಿದ್ದರೆ, ಅಸಮಾನತೆಗೆ ಒಳಗಾಗಿರುವ ಸಮುದಾಯಗಳು ಸ್ವಾತಂತ್ರ್ಯಸೌಧವನ್ನು ದ್ವಂಸ ಮಾಡುತ್ತಾರೆ ಎನ್ನುವ ಡಾ। ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ನಾವು ನೆನಪಿಡಬೇಕು. ಬಸವಣ್ಣನವರು ನುಡಿದಂತೆ ನಡೆದರು. ನಾವು ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿಗಳಾಗುತ್ತೇವೆ ಎಂದು ತಿಳಿಸಿದರು.