ವಾಲ್ಮೀಕಿ ನಿಗಮದ ಅಧಿಕಾರಿಯದ್ದು ಆತ್ಮಹತ್ಯೆಯಲ್ಲ, ಕೊಲೆ: ಬಿಜೆಪಿ

KannadaprabhaNewsNetwork | Updated : May 28 2024, 12:03 PM IST

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ. ನಿಗಮದಲ್ಲಿ ನಡೆದಿರುವ 187 ಕೋಟಿ ರು. ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನು ಅಧಿಕಾರಿಯ ತಲೆಗೆ ಕಟ್ಟಲು ಹೋಗಿ ಈ ಕೊಲೆಗಡುಕ ಸರ್ಕಾರ ಕಿರುಕುಳ ನೀಡಿ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ಅವರು ಸಾಮಾಜಿಕ ಜಾಲತಾಣದ ಮೂಲಕ ಖಾರವಾಗಿ ಪ್ರಶ್ನಿಸಿದ್ದಾರೆ.

ಸಚಿವರನ್ನು ವಜಾಗೊಳಿಸಿ- ರಾಜೀವ್‌

ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ತಮ್ಮ ಡೆತ್‌ನೋಟ್‍ನಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಇನ್ನೊಬ್ಬ ಅಧಿಕಾರಿಯ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖಿಕ ಆದೇಶದ ಪ್ರಕಾರ ಇಷ್ಟೆಲ್ಲ ಮಾಡಬೇಕಾಗಿದೆ ಎಂಬುದನ್ನು ತಿಳಿಸಿದ್ದಾರೆ. ತಮಗೆ ಬೆದರಿಕೆ ಒಡ್ಡಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ ಎಂಬುದನ್ನು ಹೇಳಿದ್ದಾರೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಕನ್ನಡಿ ಬೇರೆ ಬೇಕಿಲ್ಲ ಎಂದು ತಿಳಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11 ಸಾವಿರ ಕೋಟಿ ರು. ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರು. ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ. ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ ಈ ಪ್ರಕರಣದ ತನಿಖೆಗೆ ಆದೇಶ ಮಾಡಬೇಕು. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

Share this article