ಬಳ್ಳಾರಿ: ಮಹಾಕಾವ್ಯ ರಾಮಾಯಣವನ್ನು ಮಾನವ ಕೋಟಿಗೆ ನೀಡಿ ಮಹಾಮಾರ್ಗದರ್ಶನ ನೀಡಿದ ಶ್ರೀ ಮಹರ್ಷಿ ವಾಲ್ಮೀಕಿ ಮುನಿಗಳು ಈ ನೆಲದ ಸಂಸ್ಕೃತಿಯ ಮಹಾಸಂತ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ ಬಣ್ಣಿಸಿದರು.
24,000 ಕಾವ್ಯಗಳನ್ನು ರಚಿಸುವ ಮೂಲಕ ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ್ದಾರೆ. ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕಾಗಿದೆ ಎಂದು ಶಾಸಕರು ಅಭಿಪ್ರಾಯ ಪಟ್ಟರು.
ಸರ್ಕಾರದಿಂದ ಹಲವಾರು ಯೋಜನೆಗಳಡಿ ಸಾಲ-ಸೌಲಭ್ಯ ಒದಗಿಸಲಾಗುತ್ತಿದ್ದು, ಅವುಗಳನ್ನು ಬಳಸಿಕೊಂಡು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಆಶಿಸಿದರು.ಭಾರತೀಯ ವಾಲ್ಮೀಕಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಕುಷ್ಟಗಿಯ ಉಪನ್ಯಾಸಕ ರಂಗನಾಥ ಕುರ್ರಪ್ಪ ಸುಬೇದಾರ ಅವರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮಹಾನಗರ ಪಾಲಿಕೆ ಉಪಮೇಯರ್ ಬಿ. ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಕೆ. ಶಂಕಿನದಾಸ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್. ಮಲ್ಲಿಕಾರ್ಜುನ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಪಾಲಿಕೆ ಸದಸ್ಯರು, ಎಲ್ಲ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರು ಹಾಗೂ ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.