ಕನ್ನಡಪ್ರಭ ವಾರ್ತೆ ರೋಣ
ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಶ್ರೀ ಸಿದ್ದಾರೂಢ ಮಠದಿಂದ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆಯೂ ಅದ್ಧೂರಿಯಾಗಿ ಜರುಗಿತು.
ಸಮಾರಂಭ ಉದ್ಘಾಟಿಸಿ ಮಾತನಾಡಿದ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್, ಆದಿಕವಿ ಮಹರ್ಷಿ ವಾಲ್ಮೀಕಿಯವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ಮನುಕುಲಕ್ಕೆ ದಾರಿದೀಪ. ಅವರ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ. ವಾಲ್ಮೀಕಿ ಸಮಾಜವು ಸ್ವಾಭಿಮಾನಿ ಮತ್ತು ಶ್ರಮಜೀವಿಗಳ ಸಮಾಜವಾಗಿದ್ದು, ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಶೈಕ್ಷಣಿಕವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಎಂದರು.ಸಾನ್ನಿಧ್ಯ ವಹಿಸಿ ಮಾತನಾಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ, ಮಹರ್ಷಿ ವಾಲ್ಮೀಕಿಯವರು ರಾಮಾಯಣದ ಮೂಲಕ ಇಡೀ ಜಗತ್ತಿಗೆ ಮಾನವೀಯ ಮೌಲ್ಯಗಳು, ಸತ್ಯ ಮತ್ತು ಧರ್ಮದ ಹಾದಿಯನ್ನು ತೋರಿಸಿಕೊಟ್ಟ ಮಹಾನ್ ದಾರ್ಶನಿಕರು. ಸಮಾಜವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲವಾಗಬೇಕಾದರೆ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಯುವಜನತೆ ದುಶ್ಚಟಗಳಿಂದ ದೂರವಿದ್ದು, ವಾಲ್ಮೀಕಿ ಮಹರ್ಷಿಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.
ಸಂಘದ ತಾಲೂಕು ಅಧ್ಯಕ್ಷ ಬಸವರಾಜ ತಳವಾರ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಸಚಿವ ರಾಜುಗೌಡ ನಾಯಕ, ರೋಣ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ, ತಾಪಂ ಇಒ ಚಂದ್ರಶೇಖರ ಕಂದಕೂರ, ಪುರಸಭೆ ಮುಖ್ಯಾಧಿಕಾರಿ ರಮೇಶ ಹೊಸಮನಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ ಆಲೂರ, ಮುಖಂಡರಾದ ಎಚ್.ಎಸ್. ಸೊಂಪೂರ, ವ್ಹಿ.ಬಿ. ಸೋಮನಕಟ್ಟಿಮಠ, ಸಣ್ಣವೀರಪ್ಪ ಹಳ್ಳೆಪ್ಪನವರ, ಮಂಜುಳಾ ಹುಲ್ಲನ್ನವರ, ಮೋಹನ ಹುಲ್ಲಣ್ಣವರ, ಬಸವಂತಪ್ಪ ತಳವಾರ, ಸೋಮು ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.