13ರಂದು ಕೊಪ್ಪಳದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

KannadaprabhaNewsNetwork |  
Published : Nov 08, 2026, 02:15 AM IST
ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಪೂರ್ವಭಾವಿ ಸಭೆ ಜರುಗಿತು. | Kannada Prabha

ಸಾರಾಂಶ

ಚುನಾವಣಾ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನ. 13ರಂದು ಕೊಪ್ಪಳದ ತಾಲೂಕು ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳ: ಚುನಾವಣಾ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನ. 13ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ. 13ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಗ್ಗೆ 10 ಗಂಟೆಗೆ ಶ್ರೀ ವಾಲ್ಮೀಕಿ ಭವನದ ಉದ್ಘಾಟನೆ ನೆರವೇರಲಿದೆ. ಆನಂತರ ಅಲ್ಲಿಂದ ನಗರದ ತಾಲೂಕು ಕ್ರೀಡಾಂಗಣದ ವರೆಗೆ ಕುಂಭ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು. ಅಗತ್ಯ ಸಿದ್ಧತೆಗೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಮೂವರು ಸಚಿವರು ಹಾಗೂ ಸಮುದಾಯದ ಗುರುಗಳು ಆಗಮಿಸುವುದರಿಂದ ಕಾರ್ಯಕ್ರಮದಲ್ಲಿ ಶಿಷ್ಟಾಚಾರದಲ್ಲಿ ಯಾವುದೇ ವ್ಯತ್ಯಯವಾಗಬಾರದು. ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವ್ಯವಸ್ಥಿತವಾಗಿ ಕಾರ್ಯಕ್ರಮ ನಿರ್ವಹಿಸಿ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಮಾತನಾಡಿ, 5,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಮುದಾಯದವರು ಭಾಗವಹಿಸುವುದರಿಂದ ಕುಡಿಯುವ ನೀರು, ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಒದಗಿಸಬೇಕು. ಸಮುದಾಯದವರು ಪರಸ್ಪರ ಹೊಂದಾಣಿಕೆಯಿಂದ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ಸಮುದಾಯದ ಮುಖಂಡರು ತಮ್ಮ ಬೇಡಿಕೆಗಳ ಕುರಿತು ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಮಹಮದ್ ಜಿಲಾನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರ ಸವಡಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಪುಷ್ಪಲತಾ, ಸಮುದಾಯದ ಮುಖಂಡರಾದ ಯಮನೂರಪ್ಪ ನಾಯಕ, ಶಿವಮೂರ್ತಿ ಗುತ್ತುರ, ಸುರೇಶ ಡೋಣಿ, ಶರಣಪ್ಪ ನಾಯಕ, ಬಸವರಾಜ ಶಹಾಪುರ, ಬಸವರಾಜ ಬನ್ನಿಕೊಪ್ಪ, ರಾಮಣ್ಣ ಚೌಡ್ಕಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ