ಸಿದ್ದಾಪುರ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಪಟ್ಟಣ ಪಂಚಾಯಿತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪರಿಶಿಷ್ಟ ಜಾತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದ ಮೆರವಣಿಗೆಯನ್ನು ಡೊಳ್ಳು ವಾದ್ಯದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ಆಚರಿಸಲಾಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ದೇವರಾಜ್ ಹಿತ್ತಲ ಕೊಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಯಾಕೂಬ್ ಶೇಕ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಶಾಂತಿನಾಥ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೇಶವಮೂರ್ತಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಗಣಪತಿ ಮಹರ್ಷಿ ವಾಲ್ಮೀಕಿ ಕುರಿತ ಉಪನ್ಯಾಸ ನೀಡಿ, ದೇಶದ ಮಹಾ ಕಾವ್ಯಗಳಲ್ಲಿ ಒಂದಾದ ರಾಮಾಯಣದ ಪಾತ್ರಗಳ ಮೂಲಕ ದೇಶದ ಉತ್ಕೃಷ್ಟ ಸಂಸ್ಕೃತಿಯನ್ನು ವಿಶ್ವಕ್ಕೆ ಪರಿಚಯ ಮಾಡಿದ ಆ ಮೂಲಕ ಶ್ರೀರಾಮಚಂದ್ರರನ್ನು ದೇವಪುರುಷನನ್ನಾಗಿ ನೀಡಿದ ಖ್ಯಾತಿ ಮಹರ್ಷಿ ವಾಲ್ಮೀಕಿ ಅವರಿಗೆ ಸೇರುತ್ತದೆ. ಅಲ್ಲದೆ ಇಂದಿನವರೆಗೂ ಇದು ಪ್ರಸ್ತುತವಾಗಿದೆ ಎಂದರು.ಕಾರ್ಯಕ್ರಮದಲ್ಲಿ ತಾಲೂಕಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರಮುಖರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿಶೇಷ ಸಾಧಕರೆಂದು ವಾಲ್ಮೀಕಿ ಸಮುದಾಯದ ನಿವೃತ್ತ ಪ್ರೌಢಶಾಲಾ ಶಿಕ್ಷಕ ಪುಟ್ಟಪ್ಪ ಟಿ. ವಾಲ್ಮೀಕಿ ಅವರನ್ನು ಸನ್ಮಾನಿಸಲಾಯಿತು. ಶಿವಾಯಪ್ಪ ಎಚ್. ಸ್ವಾಗತಿಸಿದರು. ಕೇಶವಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರುಣ್ ಕುಮಾರ್ ಎಸ್.ಆರ್. ಕಾರ್ಯಕ್ರಮ ನಿರ್ವಹಿಸಿದರು. ವಿನೋದಾ ನಾಯ್ಕ ವಂದಿಸಿದರು.