ಮಂಗಳೂರು ; ರಾಮಾಯಣ ಮಹಾಕಾವ್ಯ ಜಗತ್ತಿನಲ್ಲಿ ಶ್ರೇಷ್ಠತೆ ಪಡೆಯಲು ಅದನ್ನು ಬರೆದ ಮಹರ್ಷಿ ವಾಲ್ಮೀಕಿಯವರ ಕೊಡುಗೆಯೇ ಕಾರಣ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಹೇಳಿದರು.ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಉನ್ನತ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಡಿಸಿಪಿ ಸ್ಯಾಮುವೆಲ್ ವರ್ಗೀಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್‌ಕುಮಾರ್ ಭೂಮಿರೆಡ್ಡಿ, ಡಿಸಿಆರ್‌ಇ ಪೊಲೀಸ್ ಅಧೀಕ್ಷಕ ಸೈಮನ್ ಮತ್ತಿತರರು ಇದ್ದರು.
ಐಟಿಡಿಪಿ ಯೋಜನಾ ಸಮನ್ವಯಾಧಿಕಾರಿ ಬಸವರಾಜು ಸ್ವಾಗತಿಸಿದರು. ಮಂಜುಳಾ ವಂದಿಸಿದರು.ಕಳೆದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಪಡೆದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕರ್ನಾಟಕ ಸರ್ಕಾರದ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಮೊದಲ ಸ್ಥಾನ ಪಡೆದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ 1 ಲಕ್ಷ ರು. ನಗದು ಪ್ರಶಸ್ತಿ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 619 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಾದ ಅಶ್ವಿತ ಎಂ.ಡಿ.(ಸುಳ್ಯ ಸರ್ಕಾರಿ ಜೂನಿಯರ್ ಕಾಲೇಜು) ಹಾಗೂ ನೀಲ್ ಕಮಲ್ ಎಸ್.ಕಳ್ಳಿಮನಿ (ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ) ಅವರಿಗೆ ತಲಾ 1 ಲಕ್ಷ ರು. ಬಹುಮಾನ ಮತ್ತು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.