ಕನ್ನಡಪ್ರಭವಾರ್ತೆ ಪುತ್ತೂರು/ ಉಪ್ಪಿನಂಗಡಿ ಹಿರಿಯ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ ಅರ್ಥಧಾರಿ ಕುಂಬ್ಳೆ ಶ್ರೀಧರ್ ರಾವ್(೭೬) ಅವರು ಹೃದಯಾಘಾತಕ್ಕೀಡಾಗಿ ಶುಕ್ರವಾರ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀಧರ್ ರಾವ್ ಅವರಿಗೆ ಶುಕ್ರವಾರ ಬೆಳಗ್ಗೆ ಹಠಾತ್ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಪುತ್ತೂರು ತಾಲೂಕಿನ ೩೪ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ಎಂಬಲ್ಲಿ ವಾಸಿಸುತ್ತಿದ್ದರು. ಮೂಲತಃ ಕಾಸರಗೋಡು ಜಿಲ್ಲೆಯ ಕುಂಬಳೆಯವ, ಮಹಾಲಿಂಗ ಮತ್ತು ಕಾವೇರಿ ದಂಪತಿಯ ಪುತ್ರ. ಮೃತರು ನಿವೃತ್ತ ಶಿಕ್ಷಕಿ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.ಕಲಾ ಸೇವೆ: ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಶ್ರೀಧರ್ ರಾವ್ ಅವರು ಧರ್ಮಸ್ಥಳ ಮೇಳದಲ್ಲಿ ನಿರಂತರ ೫೦ ವರ್ಷಗಳ ಸೇವೆ ಸಲ್ಲಿಸಿದ್ದರು. ಪುರುಷ ವೇಷ ಮತ್ತು ಸ್ತ್ರೀ ವೇಷ ಎರಡರಲ್ಲೂ ಪ್ರಸಿದ್ಧರಾಗಿದ್ದರು. ಈಶ್ವರ, ಸೀತೆ, ಲಕ್ಷ್ಮಣ, ಲಕ್ಷ್ಮೀ, ವಿಷ್ಣು, ದಮಯಂತಿ, ಭೀಷ್ಮ, ಅಂಬೆ, ದೇವಿ ಮಹಾತ್ಮೆಯ ದೇವಿ ಮೊದಲಾದ ಪಾತ್ರಗಳ ಮೂಲಕ ಪ್ರಸಿದ್ಧಿ ಪಡೆದಿದ್ದ ಶ್ರೀಧರ್ ರಾವ್ ಅವರು ಅಮ್ಮು ಬಳ್ಳಾಲ್ತಿ, ದಾಕ್ಷಾಯಿಣಿ, ಲಕ್ಷ್ಮಿ ಸುಭದ್ರೆಯ ಪಾತ್ರದ ಮೂಲಕವೂ ಅಪಾರ ಅಭಿಮಾನಿಗಳನ್ನು ಪಡೆದಿದ್ದರು.
ಕೊರಗ ಶೆಟ್ರ ಇರಾ ಮೇಳದ ಮೂಲಕ ಯಕ್ಷ ಪಯಣ ಆರಂಭಿಸಿದ್ದ ಶ್ರೀಧರ ರಾವ್ ಅವರು ಯಕ್ಷಗಾನ ದಿಗ್ಗಜ ಶೇಣಿಯವರ ರಾವಣ, ವಾಲಿ ಪಾತ್ರಗಳಿಗೆ ಮಂಡೋದರಿಯಾಗಿ, ತಾರೆಯಾಗಿ ಸಾಥ್ ನೀಡಿದ್ದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸಂದರ್ಭದಲ್ಲಿ ಸನ್ಮಾನ, ಎಡನೀರು ಮಠದ ಸನ್ಮಾನ ಸೇರಿದಂತೆ ಹಲವು ಸನ್ಮಾನ ಗೌರವಗಳನ್ನು ಪಡೆದುಕೊಂಡಿದ್ದರು. ಇತ್ತೀಚೆಗಷ್ಟೇ ಬೆಂಗಳೂರಿನ ಆತ್ಮಾಲಯ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಟರ್ ಟ್ರಸ್ಟ್ ಜಸ್ಟೀಸ್ ಕೆ.ಜಗನ್ನಾಥ ಶೆಟ್ಟಿ ಸ್ಮಾರಕ ಪ್ರಯುಕ್ತ ಕೊಡ ಮಾಡುವ ಪ್ರಶಸ್ತಿಗೆ ಆಯ್ಕೆಯಾಗಿದ್ದರು.
ಕುಂಬ್ಳೆ ಶ್ರೀಧರ ರಾವ್ ಅವರು ವಿವಿಧ ಯಕ್ಷಗಾನ ಮೇಳಗಳಲ್ಲಿ ವ್ಯವಸಾಯ ಮಾಡಿ, ಶ್ರೀ ಧರ್ಮಸ್ಥಳ ಮೇಳದಿಂದ ನಿವೃತ್ತಿಯಾದವರು. ದಾಕ್ಷಾಯಿಣಿ, ಸುಭದ್ರೆ, ದೌಪದಿ, ಅಮ್ಮುದೇವಿ ಮೊದಲಾದ ಸ್ತ್ರೀ ಪಾತ್ರಗಳಿಂದ ಖ್ಯಾತರಾಗಿದ್ದವರು. ಮೇಳ ತಿರುಗಾಟದ ಒಂದು ಕಾಲಘಟ್ಟದಲ್ಲಿ ಸ್ತ್ರೀ ಪಾತ್ರದಿಂದ ಪುರುಷ ಪಾತ್ರಕ್ಕೆ ಬದಲಾದವರು. ಕೀರ್ತಿಶೇಷರಾದ ಡಾ. ಶೇಣಿ ಗೋಪಾಲಕೃಷ್ಣ ಭಟ್, ರಾಮದಾಸ ಸಾಮಗ, ಶಂಕರ ನಾರಾಯಣ ಸಾಮಗ ಸಹಿತ ಹಲವು ಹಿರಿಯರ ಒಡನಾಟದಲ್ಲಿದ್ದವರು. ಶ್ರೀ ಧರ್ಮಸ್ಥಳ ಮೇಳದ ಪ್ರದರ್ಶನಗಳಲ್ಲಿ ಸ್ತ್ರೀ ಪಾತ್ರಕ್ಕೆ ಪ್ರತ್ಯೇಕವಾದ ಸ್ವಂತಿಕೆಯ ಛಾಪನ್ನು ಒತ್ತಿದ್ದ ಇವರು ತಾಳಮದ್ದಳೆ ಅರ್ಥದಾರಿಯೂ ಆಗಿದ್ದರು. ಇತ್ತೀಚೆಗಷ್ಟೇ ದಶಮಾನೋತ್ಸವದ ಸಂಭ್ರಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಕೊಡ ಮಾಡುವ ದಶಮಾನೋತ್ಸವ ಪ್ರಶಸ್ತಿಗೆ ಕುಂಬ್ಳೆ ಶ್ರೀಧರ ರಾವ್ ಆಯ್ಕೆಯಾಗಿದ್ದರು.ಶ್ರೀಧರ್ ರಾವ್ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರು: ಡಾ. ಹೆಗ್ಗಡೆಧರ್ಮಸ್ಥಳ: ನಮ್ಮ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಆತ ನಾನು ಮೆಚ್ಚಿದ ಶ್ರೇಷ್ಠ ಕಲಾವಿದರಾಗಿದ್ದು, ಕೇರಳ ಮೂಲದವರಾದರೂ, ಸ್ಪಷ್ಟ ಉಚ್ಛಾರ, ಭಾಷಾಶುದ್ಧಿ ಹಾಗೂ ಪಾತ್ರಗಳಿಗೆ ಜೀವತುಂಬುವ ಕಲೆ ಅವರಲ್ಲಿ ಅದ್ಭುತವಾಗಿತ್ತು. ನೃತ್ಯ, ಅಭಿನಯ ಮತ್ತು ಉತ್ತಮ ವಾಕ್ಪಟುತ್ವದೊಂದಿಗೆ ಅವರು ಕಲಾಭಿಮಾನಿಗಳ ಮುಕ್ತ ಪ್ರಶಂಸೆಗೆ ಪಾತ್ರರಾಗಿದ್ದರು.ಅವರ ನಿಧನದಿಂದ ಶ್ರೇಷ್ಠ ಯಕ್ಷಗಾನ ಕಲಾವಿದರೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ಕಿ-ತಾಳ್ಮೆಯನ್ನಿತ್ತು, ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಸಂತಾಪಮಂಗಳೂರು: ಹಿರಿಯ ಯಕ್ಷಗಾನ ಕಲಾವಿದರಾದ ಕುಂಬ್ಳೆ ಶ್ರೀಧರ ರಾವ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದೆ.ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ ಕುಂಬ್ಳೆ ಶ್ರೀಧರ ರಾವ್ ಅವರು ಸ್ತ್ರೀ ವೇಷಧಾರಿಯಾಗಿ, ಪುರುಷ ವೇಷಧಾರಿಯಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಧರ್ಮಸ್ಥಳ ಮೇಳವೊಂದರಲ್ಲಿಯೇ 50 ವರ್ಷಗಳ ಸೇವೆ ಮಾಡಿದ್ದಾರೆ.ಯಕ್ಷಗಾನಕ್ಕೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕಸಾಪ ಜಿಲ್ಲಾ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ ತನ್ನ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಕಲ್ಕೂರ ಸಂತಾಪ: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಹಿರಿಯ ತಲೆಮಾರಿನ ಸಾಂಪ್ರದಾಯಿಕ ವೇಷಧಾರಿ ಕುಂಬ್ಳೆ ಶ್ರೀಧರ ರಾವ್ ಅಗಲಿಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ಅಧ್ಯಕ್ಷ ಹಾಗೂ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.