ಪಶುವೈದ್ಯಕೀಯ ಕೇಂದ್ರ ಸ್ಥಳಾಂತರ: ಆಕ್ಷೇಪಣೆಗೆ ಸರ್ಕಾರಕ್ಕೆ ಕಾಲಾವಕಾಶ

KannadaprabhaNewsNetwork |  
Published : Feb 06, 2024, 01:31 AM IST
ಪಶು ಆಸ್ಪತ್ರೆ | Kannada Prabha

ಸಾರಾಂಶ

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲೂಕುಗಳಲ್ಲಿನ 28 ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರ ಮಾಡಲು ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲೂಕುಗಳಲ್ಲಿನ 28 ಪಶುವೈದ್ಯ ಕೇಂದ್ರಗಳನ್ನು ಬೇರೆಡೆ ಸ್ಥಳಾಂತರ ಮಾಡಲು ಮುಂದಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿದೆ.

ಈ ಕುರಿತು ಅನಿಮಲ್ ರೈಟ್ಸ್ ಫಂಡ್ ಹಾಗೂ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಸೇರಿದಂತೆ ಮತ್ತಿತರರು ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು, ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.

ಈ ವೇಳೆ ಅರ್ಜಿದಾರರ ಪರ ವಕೀಲರು, ನಗರದಲ್ಲಿ ಪ್ರತಿ ನಿತ್ಯ ಸುಮಾರು 600ರಿಂದ 700 ಸಾಕು ಪ್ರಾಣಿಗಳು ಅನಾರೋಗ್ಯಕ್ಕೆ ಒಳಗಾಗುತ್ತಿವೆ. ಅವುಗಳಿಗೆ ಅಗತ್ಯ ಚಿಕಿತ್ಸೆ ನೀಡಬೇಕು. ಹೀಗಿರುವಾಗ ನಗರದಲ್ಲಿರುವ ಪಶು ವೈದ್ಯಕೀಯ ಆಸ್ಪತ್ರೆಗಳನ್ನು ಬೇರೆಡೆಗೆ ಸ್ಥಳಾಂತರಕ್ಕೆ ಮುಂದಾಗಿರುವ ಸರ್ಕಾರದ ಕ್ರಮ ಸರಿಯಲ್ಲ. ಈ ನಿರ್ಧಾರದಿಂದ ತಮ್ಮ ಪಶುಗಳಿಗೆ ಹಾಗೂ ಸಾಕು ಪ್ರಾಣಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುವ ಸ್ಥಿತಿ ಬಂದೊದಗಿದೆ. ಇದು ರೈತರು ಹಾಗೂ ಸಾಕು ಪ್ರಾಣಿಯ ಮಾಲೀಕರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ಹಾಗಾಗಿ, ಪಶು ಚಿಕಿತ್ಸಾಲಯಗಳನ್ನು ಸ್ಥಳಾಂತರಿಸಲು ಕೈಗೊಂಡಿರುವ ಸರ್ಕಾರದ ಕ್ರಮ ರದ್ದುಪಡಿಸಬೇಕು ಎಂದು ಕೋರಿದರು.

ಸರ್ಕಾರದ ಪರ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅ ಮನವಿ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆ.19ಕ್ಕೆ ಮುಂದೂಡಿತು.

ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಕೇಂದ್ರಗಳ ಪ್ರಾರಂಭಕ್ಕೆ ನಿರ್ಧರಿಸಿದ್ದು, 2022ರ ಮೇ 17ರಂದು ಆದೇಶ ಹೊರಡಿಸಿದೆ. ಮೊದಲ ಹಂತದ ಭಾಗವಾಗಿ 20 ಪಶು ವೈದ್ಯಕೀಯ ಕೇಂದ್ರಗಳನ್ನು ಪ್ರಾರಂಭಿಸಿದೆ. ಈ ಆದೇಶ ಜಾರಿ ಮಾಡುವುದಕ್ಕೂ ಮುನ್ನ ಪಶು ನಗರದಲ್ಲಿರುವ 28 ಪಶು ವೈದ್ಯಕೀಯ ಆಸ್ಪತ್ರೆಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿರುವುದು ಸರಿಯಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!