ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿನ ಖಂಜರಗಲ್ಲಿ, ಕ್ಯಾಂಪ್, ಕಸಾಯಿಗಲ್ಲಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಬಕ್ರೀದ್ ಸಂದರ್ಭದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗುತ್ತಿದೆ. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದ್ದು, ಕೋಟ್ಯಂತರ ಹಿಂದೂಗಳು ಗೋವನ್ನು ಪೂಜ್ಯನೀಯವಾಗಿ ಕಾಣುತ್ತಾರೆ. ದೇಶದ ಕೃಷಿ ವ್ಯವಸ್ಥೆಯೂ ಶತಮಾನಗಳಿಂದ ಗೋ ಆಧಾರಿತವಾಗಿದ್ದು, ಗೋಸಂರಕ್ಷಣೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ಜವಾಬ್ದಾರಿಯಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದ ಕಾನೂನುಗಳು ಜಾರಿಯಲ್ಲಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್ ಹಾಗೂ ವಿವಿಧ ನ್ಯಾಯಾಲಯಗಳು ಗೋಸಂರಕ್ಷಣೆ ಮತ್ತು ಕಾನೂನು ಪಾಲನೆಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ಮನವಿ ಮಾಡಲಾಗಿದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನುಬಾಹಿರ ಕೃತ್ಯಗಳಿಗೆ ಅವಕಾಶ ನೀಡದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಪೊಲೀಸ್ ಬಂದೋಬಸ್ತ್, ವಾಹನ ತಪಾಸಣೆ, ಪ್ರಾಣಿ ಸಾಗಾಟದ ಮೇಲ್ವಿಚಾರಣೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.ನಗರದ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂಬ ವಿಶ್ವಾಸವನ್ನು ಮನವಿ ಸಲ್ಲಿಸಿದ ಮುಖಂಡರು ವ್ಯಕ್ತಪಡಿಸಿದರು.ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮುನಿಸ್ವಾಮಿ ಭಂಡಾರಿ, ಡಾ. ಸುಭಾಷ ಪಾಟೀಲ, ಸಂದೀಪ ಓವಳಕರ, ನೇತ್ರಾವತಿ ಭಾಗವತ್, ವಿಜಯ ಜಾಧವ, ಆನಂದ ಕರಲಿಂಗಣ್ಣವರ, ಮಗನ್‌ಭಾಯಿ ಪಾಟೀಲ, ಡಾ. ಬಸವರಾಜ ರೇವಣ್ಣ ಸೇರಿದಂತೆ ಹಿಂದೂ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.