ಬೈ ಎಲೆಕ್ಷನ್‌ನಲ್ಲಿ ಗೆಲುವು: ಜಿಲ್ಲೆಯಾದ್ಯಂತ ಕಾಂಗ್ರೆಸ್‌ ವಿಜಯೋತ್ಸವ

KannadaprabhaNewsNetwork | Published : Nov 24, 2024 1:47 AM

ಸಾರಾಂಶ

ಚಿಕ್ಕಮಗಳೂರು, ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಶಾಸಕರ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು.

- ಪಟಾಕಿ ಸಿಡಿಸಿ ವಿಜಯೋತ್ಸವ । ಹಲವೆಡೆ ಸ್ಥಳೀಯ ಶಾಸಕರು ಭಾಗಿ । ಕೈ ಹಿಡಿದ ಗ್ಯಾರಂಟಿ

--

- ಕಾಂಗ್ರೆಸ್‌ ಪಕ್ಷ ಹಾಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪರವಾಗಿ ಘೋಷಣೆ

- ಮತದಾರರು ಈ ಸಮೀಕ್ಷೆಗಳನ್ನು ಸುಳ್ಳಾಗಿಸಿದ್ದಾರೆ.

- ಪಂಚ ಗ್ಯಾರಂಟಿಗಳಿಂದ ಜನಕ್ಕೆ ಸಹಾಯ ಇದಕ್ಕೆ ಫಲಿತಾಂಶವೇ ಸಾಕ್ಷಿ

- ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಗೆಲುವುಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಶಾಸಕರ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು.

ಚಿಕ್ಕಮಗಳೂರಿನಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರೆ, ಶೃಂಗೇರಿ ಕೆವಿಆರ್‌ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರೆ, ತರೀಕೆರೆ ಪಟ್ಟಣದ ಪುರಸಭೆ ಎದುರು ಶಾಸಕ ಜಿ.ಎಚ್‌. ಶ್ರೀನಿವಾಸ್‌ ನೇತೃತ್ವದಲ್ಲಿ, ಎನ್. ಆರ್‌.ಪುರ ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಶಾಸಕ ಟಿ.ಡಿ. ರಾಜೇಗೌಡ ನೇತೃತ್ವದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು. ಮೂಡಿಗೆರೆ ಪಟ್ಟಣದ ಲಯನ್ಸ್‌ ವೃತ್ತದಲ್ಲಿ ಕಾಂಗ್ರೆಸ್‌ ತಾಲೂಕು ಪ್ರಧಾನ ಕಾರ್ಯದರ್ಶಿ ಸಂಪತ್‌ ಕುಮಾರ್‌ ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹನುಮಂತಪ್ಪ ವೃತ್ತಕ್ಕೆ ಆಗಮಿಸಿದ ಶಾಸಕ ಎಚ್‌.ಡಿ. ತಮ್ಮಯ್ಯ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಪಟಾಕಿ ಸಿಡಿಸಿದ ಬಳಿಕ ಕಾಂಗ್ರೆಸ್‌ ಪಕ್ಷ ಹಾಗೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಪರವಾಗಿ ಘೋಷಣೆ ಹಾಕಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಎಚ್‌.ಡಿ. ತಮ್ಮಯ್ಯ, ಉಪ ಚುನಾವಣೆ ಪ್ರಚಾರ ಹಾಗೂ ಅದಕ್ಕೂ ಮೊದಲು ಬಿಜೆಪಿ, ಜೆಡಿಎಸ್‌ ಪಕ್ಷಗಳು ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅಪಪ್ರಚಾರ ಮಾಡಿದ್ದವು. ಇದ್ಯಾವುದಕ್ಕೂ ಬಗ್ಗಲ್ಲ, ಜಗ್ಗಲ್ಲ ಎಂದು ಮುಖ್ಯಮಂತ್ರಿಯವರು ಪ್ರತಿಪಕ್ಷಗಳಿಗೆ ಎಚ್ಚರಿಕೆ ನೀಡಿದ್ದರು ಎಂದು ಹೇಳಿದರು.

ಈ ಮೂರು ಕ್ಷೇತ್ರಗಳಲ್ಲಿ ಮತದಾರರು ಕಾಂಗ್ರೆಸ್‌ ಪಕ್ಷದ ಕೈ ಹಿಡಿದಿದ್ದಾರೆ. ಈ ಮೂಲಕ ಪ್ರತಿಪಕ್ಷಗಳಿಗೆ ಮುಖಭಂಗ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಿಂದ ಜನರಿಗೆ ಸಹಾಯವಾಗಿದೆ. ಇದಕ್ಕೆ ಈ ಚುನಾವಣಾ ಫಲಿತಾಂಶವೇ ಸಾಕ್ಷಿ ಎಂದರು.

ಈ ಉಪ ಚುನಾವಣೆ ನಂತರ ನಡೆದ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೋಲಾಗುತ್ತದೆ ಎಂದು ಹೇಳಲಾಗಿತ್ತು. ಮತ ದಾರರು ಈ ಸಮೀಕ್ಷೆಗಳನ್ನು ಸುಳ್ಳಾಗಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ ಎಂದ ಅವರು, ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕ ಗಾಂಧಿ ಜಯಗಳಿಸಿದ್ದಾರೆ ಎಂದು ಹೇಳಿದರು.

ವಿಜಯೋತ್ಸವದಲ್ಲಿ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್‌, ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ವಿಧಾನಪರಿಷತ್‌ ಮಾಜಿ ಸದಸ್ಯೆ ಎ.ವಿ. ಗಾಯತ್ರಿ ಶಾಂತೇ ಗೌಡ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್‌, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ಎಂ.ಎಲ್‌. ಮೂರ್ತಿ, ಡಾ. ಡಿ.ಎಲ್‌. ವಿಜಯಕುಮಾರ್‌, ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ಪುಟ್ಟೇಗೌಡ, ಉಪ್ಪಳ್ಳಿ ಕೆ. ಭರತ್‌, ಪುಟ್ಟೇಗೌಡ ಬಿಳೇಕಲ್ಲು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

23 ಕೆಸಿಕೆಎಂ 1ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿದ್ದರಿಂದ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು. ಶಾಸಕ ಎಚ್‌.ಡಿ. ತಮ್ಮಯ್ಯ, ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ, ಬಿ.ಎಚ್‌. ಹರೀಶ್‌ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

Share this article