ಕನ್ನಡಪ್ರಭ ವಾರ್ತೆ ಅರಕಲಗೂಡುತಾಲೂಕಿನ ರಾಮನಾಥಪುರದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ.ಈ ಹಿನ್ನೆಲೆಯಲ್ಲಿ ಶಾಸಕ ಎ. ಮಂಜು ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಸೇತುವೆ ಕಾಮಗಾರಿಯನ್ನು ವೀಕ್ಷಿಸಿದರು. ಕಾಮಗಾರಿಯ ಗುಣಮಟ್ಟ ಹಾಗೂ ಪೂರ್ಣಗೊಂಡಿರುವ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಾಮನಾಥಪುರ ಭಾಗದ ಸಾರ್ವಜನಿಕರು, ವಾಹನ ಸವಾರರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಿರುವ ಈ ಸೇತುವೆಯು ಈ ಭಾಗದ ಜನರ ಬಹುದಿನಗಳ ಅಗತ್ಯವನ್ನು ಈಡೇರಿಸಲಿದೆ. ಸೇತುವೆ ಸಾರ್ವಜನಿಕರ ಬಳಕೆಗೆ ಬಂದಲ್ಲಿ ಸಂಚಾರದ ಅನುಕೂಲತೆ ಹೆಚ್ಚುವುದರ ಜೊತೆಗೆ ಸ್ಥಳೀಯ ಜನರ ದೈನಂದಿನ ಚಟುವಟಿಕೆಗಳಿಗೂ ಹೆಚ್ಚಿನ ಅನುಕೂಲವಾಗಲಿದೆ.ಸೇತುವೆ ಕಾಮಗಾರಿ ಸಂಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಉದ್ಘಾಟನೆ ನೆರವೇರಿಸುವ ಮೂಲಕ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಶೀಘ್ರದಲ್ಲೇ ರಾಮನಾಥಪುರದ ಕಾವೇರಿ ನದಿಯ ಸೇತುವೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಲಿದ್ದು, ಈ ಭಾಗದ ಜನರ ಬಹುದಿನಗಳ ನಿರೀಕ್ಷೆ ನನಸಾಗಲಿದೆ.