ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕು ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಶುಕ್ರವಾರ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿ ಬಳಿಕ ಮಾತನಾಡಿ, ರಾಜ್ಯದಲ್ಲಿ ಅಂದಾಜು 10.450 ಗ್ರಾಮ ಸಹಾಯಕರು 1978 ರಿಂದ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ‘ಡಿ’ ಗ್ರೂಪ್ ನೌಕರರನ್ನಾಗಿ ಪರಿಗಣಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಿಸಿದ್ದರು ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.
ಅಲ್ಲದೇ, ಗ್ರಾಮ ಸಹಾಯಕರ ಬೇಡಿಕೆಗಳ ಕುರಿತು 2025 ಸೆಪ್ಟೆಂಬರ್ 25ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾಸಿಕ 27 ಸಾವಿರ ಗೌರವಧನ ನೀಡುವ ಬಗ್ಗೆ ಚರ್ಚೆ ನಡೆದಿದ್ದರೂ ಇದುವರೆಗೆ ಸರ್ಕಾರದಿಂದ ಯಾವುದೇ ಆದೇಶ ಹೊರಡಿಸಿಲ್ಲ. ಸುದೀರ್ಘ ಸೇವೆ ಹೊರತಾಗಿಯೂ ಸೂಕ್ತ ವೇತನ ಮತ್ತು ಸೇವಾ ಭದ್ರತೆ ಇಲ್ಲದೆ ಗ್ರಾಮ ಸಹಾಯಕರು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರ ಈ ಕೂಡಲೇ ಗ್ರಾಮ ಸಹಾಯಕರ ಬೇಡಿಕೆ ಈಡೇರಿಸಬೇಕು. ಆ.24ರಂದು ನಡೆಯುವ ಮುಷ್ಕರದಲ್ಲಿ ತಾಲೂಕಿನಿಂದ ಅಂದಾಜು 80 ಕ್ಕೂ ಹೆಚ್ಚು ಗ್ರಾಮ ಸಹಾಯಕರು ಭಾಗವಹಿಸಲಿದ್ದಾರೆ. ಹೀಗಾಗಿ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಅವರಿಂದ ಅನುಮತಿ ಕೋರಲಾಗಿದೆ ಎಂದರು.