ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಪಂ ಸೇರ್ಪಡೆ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ

KannadaprabhaNewsNetwork |  
Published : Jun 01, 2025, 11:55 PM IST
1ಕೆಎಂಎನ್ ಡಿ25 | Kannada Prabha

ಸಾರಾಂಶ

ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಆದರೆ, ಗ್ರಾಮಸ್ಥರ ವಿರೋಧದ ನಡುವೆಯೂ ಗ್ರಾಪಂ ತುರ್ತು ಸಭೆಯಲ್ಲಿ ಅನುಮೋದನೆ ನೀಡಿ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ ಪರಿಣಾಮ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ಇದಕ್ಕೆ ಗ್ರಾಮಸ್ಥರ ತೀವ್ರ ವಿರೋಧವಿದೆ.

ಕನ್ನಡಪ್ರಭ ವಾರ್ತೆ ಮದ್ದೂರು

ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿಯನ್ನು ಸೇರ್ಪಡೆಗೊಳಿಸಲು ಮುಂದಾಗಿರುವುದನ್ನು ಖಂಡಿಸಿ ಗ್ರಾಮಸ್ಥರು ಶನಿವಾರ ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದರು.

ಗ್ರಾಪಂ ಕಚೇರಿ ಎದುರು ಸದಸ್ಯರು, ರೈತ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಜತೆಗೂಡಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, ಪುರಸಭೆಯನ್ನು ರಾಜ್ಯ ಸರ್ಕಾರ ನಗರಸಭೆಯನ್ನಾಗಿ ಮೇಲ್ದರ್ಜೆಗೆರಿಸಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆದರೆ, ಗೆಜ್ಜಲಗೆರೆ ಗ್ರಾಪಂ ಅನ್ನು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದರು.

ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೂ ಮುನ್ನ ಜಿಲ್ಲಾಡಳಿತ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ಆದರೆ, ಗ್ರಾಮಸ್ಥರ ವಿರೋಧದ ನಡುವೆಯೂ ಗ್ರಾಪಂ ತುರ್ತು ಸಭೆಯಲ್ಲಿ ಅನುಮೋದನೆ ನೀಡಿ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ ಪರಿಣಾಮ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ಇದಕ್ಕೆ ಗ್ರಾಮಸ್ಥರ ತೀವ್ರ ವಿರೋಧವಿದೆ ಎಂದರು.ನಗರಸಭೆಗೆ ನಮ್ಮ ಗ್ರಾಮಗಳು ಸೇರ್ಪಡೆಯಾದರೇ ತೆರಿಗೆ ಕಟ್ಟುವುದು ಜಾಸ್ತಿ ಆಗುತ್ತೆ. ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಪೈಪೋಟಿ ಜಾಸ್ತಿ ಆಗುತ್ತದೆ. ಅಲ್ಲದೇ, ಈಗ ದೊರೆಯುತ್ತಿರುವ ಗ್ರಾಮೀಣ ಕೃಪಾಂಕ ಸಹ ಹೋಗುತ್ತದೆ. ನರೇಗಾದ ಕೆಲಸಗಳಿಗೆ ಬಡ ಜನರು ಸಿಗಲ್ಲ. ಹೀಗಾಗಿ ನಮಗೆ ನಗರಸಭೆ ಬೇಡ, ಗ್ರಾಪಂ ಸಾಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ತಾಪಂ ಮಾಜಿ ಅಧ್ಯಕ್ಷ ಜಿ.ಪಿ.ಯೋಗೇಶ್ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿನ ಈಗಿನ ವಾರ್ಡ್‌ಗಳೇ ಅಭಿವೃದ್ಧಿ ಕಂಡಿಲ್ಲ. ಸರಿಯಾದ ರಸ್ತೆ, ಚರಂಡಿಯಿಲ್ಲ. ಕುಡಿಯುವ ನೀರಿನ ಸೌಲಭ್ಯ ಹಾಗೂ ಸ್ಮಶಾನಗಳು ಸೇರಿದಂತೆ ಪಟ್ಟಣ ವ್ಯಾಪ್ತಿಯ ಅವ್ಯವಸ್ಥೆಗಳು ತುಂಬಿರುವಾಗ ಸುತ್ತಮುತ್ತಲಿನ ಗ್ರಾಮಗಳನ್ನು ಸೇರಿಸಿದರೆ ವ್ಯಾಪ್ತಿ ದೊಡ್ಡದಾಗುತ್ತದೆ. ಆಗ ಗ್ರಾಮಗಳ ಜನ ಅಭಿವೃದ್ಧಿಗೆ ಪರದಾಡಬೇಕಾಗುತ್ತದೆ. ಹೀಗಾಗಿ ಗ್ರಾಪಂ ಅನ್ನು ನಗರಸಭೆ ವ್ಯಾಪ್ತಿಗೆ ಸೇರಿಸದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಕೂಡಲೇ ಗೆಜ್ಜಲಗೆರೆಯನ್ನು ನಗರಸಭೆಗೆ ಸೇರಿಸುವ ನಿರ್ಧಾರವನ್ನು ಕೈ ಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಧಿಕಾರಿಗಳ ವಿರುದ್ಧ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಪಂ ನರೇಗಾ ಸಹಾಯಕ ನಿರ್ದೇಶಕ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಗ್ರಾಪಂ ಅಧ್ಯಕ್ಷೆ ರಾಧಾ ರಾಘವೇಂದ್ರ, ಸದಸ್ಯರಾದ ಜಿ.ಬಿ.ಶಿವಯ್ಯ, ಜಿ.ವಿ.ದೀಪಕ್, ಆದಿಮೂರ್ತಿ, ಮುಖಂಡರಾದ ಲಿಂಗಪ್ಪಾಜಿ, ಜಿ.ಎ.ಶಂಕರ್, ಮಂಜುನಾಥ್, ಜಿ.ಪಿ.ಮೋಹನ್, ಪುಟ್ಟಸ್ವಾಮಿ, ಜಿ.ಸಿ.ಮಹೇಂದ್ರ, ರಾಮು, ಯಶೋಧಮ್ಮ, ಭಾಗ್ಯ, ಪುಷ್ಪಾ, ಅಶ್ವಿನಿ ಸೇರಿದಂತೆ ಇತರರು ಭಾಗವಹಿಸಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ