- ಬಾಡ ಗ್ರಾಮದಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ ಸಲಹೆ । ಬಾಡ-ಕಬ್ಬೂರು ಸಂಪರ್ಕ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾಮಗಾರಿ ಗುಣಮಟ್ಟದ ಬಗ್ಗೆ ಸ್ಥಳೀಯರು ಕಾಳಜಿ ವಹಿಸಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಾಡ ಗ್ರಾಮದಲ್ಲಿ ಬುಧವಾರ ₹1 ಕೋಟಿ ವೆಚ್ಚದ ಬಾಡ-ಕಬ್ಬೂರು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ನಿಗದಿಪಡಿಸಿದ ಅವಧಿಯೊಳಗೆ ಸಾರ್ವಜನಿಕರ ಬಳಕೆಗೆ ಲಭ್ಯ ಆಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು ಎಂದರು.
ಗ್ರಾಮ ಸಂಚಾರ:
ಜನರನ್ನು ಭೇಟಿ ಮಾಡಬೇಕು. ಗ್ರಾಮಗಳಲ್ಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳನ್ನು ಖುದ್ದಾಗಿ ಆಲಿಸಬೇಕು. ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಪ್ರಯತ್ನಿಸಬೇಕು. ಈಗಾಗಲೇ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕೆಲಸಗಳು ಹೇಗೆ ನಡೆಯುತ್ತವೆ ಎನ್ನುವುದನ್ನು ವೀಕ್ಷಿಸಬೇಕು ಮತ್ತು ಗ್ರಾಮಗಳಲ್ಲಿ ಇನ್ನು ಇನ್ನೇನು ಕೆಲಸಗಾಗಳಾಗಬೇಕು ಎನ್ನುವುದನ್ನು ತಿಳಿದುಕೊಳ್ಳಲು ಗ್ರಾಮ ಸಂಚಾರ ಮಾಡುತ್ತಿದ್ದೇನೆ ಎಂದು ತಿಳಿಸಿದರು.ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲ ಗ್ರಾಮಗಳಲ್ಲಿ ಆದ್ಯತೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಚಾಲ್ತಿಯಲ್ಲಿರುವ ಎಲ್ಲ ಕೆಲಸಗಳು ಗುಣಮಟ್ಟದಿಂದ ಆಗಬೇಕು. ಅಧಿಕಾರಿಗಳು ಕೇವಲ ಕಚೇರಿಗಳಿಗೆ ಮಾತ್ರ ಸೀಮಿತರಾಗದೇ ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆಲಸಗಳನ್ನು ಪರಿಶೀಲಿಸಬೇಕು. ಕೆಲಸ ಸರಿಯಾಗಿ ಆಗುವಂತೆ ನೋಡಿಕೊಳ್ಳಬೇಕು. ಯೋಜನೆಗಳು ನಿಗದಿತ ಅವಧಿಯಲ್ಲಿ ಸಾಕಾರಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತಮ್ಮ, ಮುಖಂಡರಾದ ರುದ್ರಸ್ವಾಮಿ, ಸೈಪುಲ್ಲಾ, ನಾಗಣ್ಣ, ಸುರೇಶ್, ಕುಮಾರ್, ದಿನೇಶ್, ಶಿವಣ್ಣ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.- - -
(ಬಾಕ್ಸ್) * ಮಳೆಹಾನಿ ಸ್ಥಳಕ್ಕೆ ಭೇಟಿ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಕಣಿವೆಬಿಳಚಿ ಗ್ರಾಮದಲ್ಲಿ ನಿರಂತರ ಸುರಿದ ಮಳೆಯಿಂದಾಗಿ 2 ಮನೆಗಳು ಬಿದ್ದ ಘಟನಾ ಸ್ಥಳಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿದ ಪರಿಶೀಲನೆ ನಡೆಸಿದರು. ಗ್ರಾಮದ ಸುವರ್ಣಮ್ಮ ಹಾಗೂ ಹೀರಾಬೋವಿ ಎಂಬವರ ಮನೆಗಳು ಮಳೆಗೆ ಬಿದ್ದಿವೆ. ಕೂಡಲೇ ನಿರಾಶ್ರಿತರಿಗೆ ಪರಿಹಾರ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಬಸವಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್, ಮುಖಂಡರಾದ ಮಂಜಣ್ಣ, ಗುಂಡಣ್ಣ, ಜಯರಾಮಪ್ಪ, ನಾಗಣ್ಣ, ಸುರೇಶಣ್ಣ, ಗ್ರಾಮಸ್ಥರು ಹಾಜರಿದ್ದರು.- - -
-18ಕೆಡಿವಿಜಿ32, 33:ಬಾಡ ಗ್ರಾಮದಲ್ಲಿ ₹1 ಕೋಟಿ ವೆಚ್ಚದ ಬಾಡ-ಕಬ್ಬೂರು ಗ್ರಾಮಗಳ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.