ಹಗರಿಬೊಮ್ಮನಹಳ್ಳಿ: ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಪ್ರಸಕ್ತ ಸಾಲಿನಿಂದಲೇ ಪದವಿ ಕಾಲೇಜು ಪ್ರಾರಂಭಿಸುವಂತೆ ಆಗ್ರಹಿಸಿ ಗ್ರಾಮದ ವಿದ್ಯಾರ್ಥಿಗಳು ಹಾಗೂ ಪೋಷಕರು ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್ ನೇತೃತ್ವದ ನಿಯೋಗದ ಮೂಲಕ ಶನಿವಾರ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಗೆ ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ಪದವಿ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಗ್ರಾಮದ ವಿದ್ಯಾರ್ಥಿಗಳು ಮತ್ತು ಪೋಷಕರು ಕಳೆದ ೧೦ ವರ್ಷಗಳಿಂದ ನಿರಂತರ ಹೋರಾಟ ಮಾಡಿದ್ದಾರೆ. ಪತ್ರ ಚಳವಳಿ ಸೇರಿದಂತೆ ೧೭ಕಿಮೀ ದೂರದ ಹಗರಿಬೊಮ್ಮನಹಳ್ಳಿ ಪಟ್ಟಣಕ್ಕೆ ಮೂರು ಬಾರಿ ಮತ್ತು ೫೦ ಕಿಮೀ ದೂರದ ಜಿಲ್ಲಾ ಕೇಂದ್ರಕ್ಕೆ ಒಮ್ಮೆ ಪಾದಯಾತ್ರೆಯ ಮೂಲಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದರೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯುದಯ ಇನ್ನೂ ಕನ್ನಡಿಯೊಳಗಿನ ಗಂಟಾಗಿದೆ ಎಂದು ಖೇದ ವ್ಯಕ್ತಪಡಿಸುತ್ತಾರೆ.
ಗ್ರಾಮದಲ್ಲಿ ಪದವಿ ಕಾಲೇಜಿಗಾಗಿ ೩ಎಕರೆ ಗ್ರಾಮಠಾಣಾ ನಿವೇಶನ ಕಾಯ್ದಿರಿಸಲಾಗಿದೆ. ಕಲಬುರಗಿಯ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜನ್ನು ಆರಂಭಿಸುವಂತೆ ೨೦೨೪ರಲ್ಲಿ ಉನ್ನತ ಶಿಕ್ಷಣ ಇಲಾಖೆ ಶಿಫಾರಸ್ಸು ಮಾಡಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಸಚಿವ ಬಸವರಾಜ ರಾಯರೆಡ್ಡಿ ಸಂಬಂಧಿಸಿದ ಕಡತ ಪರಿಶೀಲಿಸಿ ೨೦೨೬-೨೭ರ ಸಾಲಿನಲ್ಲಿಯೇ ಪದವಿ ಕಾಲೇಜನ್ನು ಆರಂಭಿಸುವ ಮೂಲಕ ಗ್ರಾಮೀಣ ವಿದ್ಯಾರ್ಥಿಗಳ ಪದವಿ ಶಿಕ್ಷಣಕ್ಕೆ ನೆರವಾಗಬೇಕು ಎಂದು ಕೋರಿದರು.ಈ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಗೌರವಾಧ್ಯಕ್ಷ ಬಾವಿ ಬೆಟ್ಟಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜಿಪಂ ಮಾಜಿ ಸದಸ್ಯ ಹೆಗ್ಡಾಳ ರಾಮಣ್ಣ, ಪುರಸಭೆಯ ಮಾಜಿ ಅಧ್ಯಕ್ಷ ಎಂ.ಮರಿರಾಮಣ್ಣ, ಮಾಜಿ ಸದಸ್ಯ ಚಿಂತ್ರಪಳ್ಳಿ ದೇವೇಂದ್ರಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸುರೇಶ್ ಪಟ್ಟಣಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಗಿರೀಶ್ ಗೌರಜ್ಜನವರ್ ಹಾಗೂ ಪಿ. ಕೊಟ್ರೇಶ್ ಮತ್ತಿತರರು ನಿಯೋಗದಲ್ಲಿದ್ದರು.