ಧಾರವಾಡ: ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶಗೌಡ ಕೊಲೆ ಆರೋಪದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.
2016 ರಲ್ಲಿ ಬಿಜೆಪಿ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆಯಲ್ಲಿ ವಿನಯ ಕುಲಕರ್ಣಿ ಪಾತ್ರ ಇದೆ ಎಂದು ಆರೋಪಿಸಲಾಗಿತ್ತು. ಆಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರ್‍ಯಾಲಿಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿನಯ್ ಕುಲಕರ್ಣಿಯನ್ನು ಜೈಲಿಗೆ ಕಳುಹಿಸುವುದಾಗಿ ಪ್ರತಿಜ್ಞೆ ಮಾಡಿದ್ದರು.
ನಂತರ ಬಂದ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತು. ತನಿಖೆ ನಂತರ ವಿನಯ್ ಕುಲಕರ್ಣಿಯನ್ನು ಬಂಧಿಸಲಾಗಿತ್ತು. ಅವರು 9 ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದು ಜಾಮೀನು ಪಡೆದಿದ್ದರು. ಇದೀಗ ಜಾಮೀನು ರದ್ದಾಗಿದ್ದು ವಿನಯ ಕುಲಕರ್ಣಿ ಅವರ ಮುಂದಿನ ಹೆಜ್ಜೆ, ರಾಜಕೀಯ ಭವಿಷ್ಯವೇನಾಗಲಿದೆ ಕಾದು ನೋಡಬೇಕಿದೆ.