ಕನ್ನಡಪ್ರಭ ವಾರ್ತೆ ಮಡಿಕೇರಿ
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಶುಕ್ರವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿಂದ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ಸುಳ್ಳು ದೂರು ನೀಡಿ ಕೇಸ್ ದಾಖಲಿಸಲಾಗುತ್ತಿದೆ. ಅಮಾಯಕ ವಿನಯ್ ಸಾವಿಗೆ ಕಾರಣರಾದವರ ವಿರುದ್ಧ ಕೂಡಲೇ ಕಾನೂನು ಕ್ರಮಕ್ಕೆ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.
ವಿನಯ್ ಡೆತ್ ನೋಟ್‌ನಲ್ಲಿ ಆರೋಪಿಸಿರುವಂತೆ ಜಿಲ್ಲೆಯ ಇಬ್ಬರು ಶಾಸಕರು, ಕಾಂಗ್ರೆಸ್ ಮುಖಂಡರ ಬಂಧನಕ್ಕೆ ಬಿಜೆಪಿಯ ಪ್ರತಿಭಟನಾಕಾರರು ಒತ್ತಾಯಿಸಿದರು.ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ವಿನಯ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ನ್ಯಾಯಾಲಯದಿಂದ ತಡೆ ದೊರೆತ್ತಿದ್ದರೂ ಪೊಲೀಸರು ಬೇರೆ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲು ಪ್ರಯತ್ನಿಸಿದ್ದಾರೆ. ಅಶುಚಿತ್ವದಿಂದ ಕೂಡಿದ್ದ ನಾಪೋಕ್ಲು ಸಾರ್ವಜನಿಕ ಶೌಚಾಲಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿನಯ್ ವಿಚಾರ ಹಂಚಿಕೊಂಡಿದ್ದೇ ದೊಡ್ಡ ತಪ್ಪು ಎಂದು ಪ್ರತಿಬಿಂಬಿಸಿ ಎಫ್‌ಐಆರ್ ದಾಖಲಿಸಲಾಗಿದೆ. ಶೌಚಾಲಯವನ್ನು ಶುಚಿಗೊಳಿಸಲು ಕ್ರಮಕೈಗೊಳ್ಳದೆ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಪೊಲೀಸರು ಕಾಂಗ್ರೆಸ್ ಶಾಸಕರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಕೋರ್ಟ್, ದೇಶಕ್ಕೂ ಬೆಲೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆಯಾದ ವಿಚಾರಕ್ಕೂ ವಿನಯ್‌ಗೂ ಯಾವುದೇ ಸಂಬಂಧ ಇರುವುದಿಲ್ಲ. ಇಂದು ಅಮಾಯಕನ ಸಾವಾಗಿದೆ, ವಿನಯ್‌ನ ತಪ್ಪಿಲ್ಲ ಎಂದು ತಿಳಿದಿದ್ದರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಜಿಲ್ಲೆಯ ಇಬ್ಬರು ಶಾಸಕರು ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಪ್ರತಿಭಟನಕಾರರು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬರಬೇಕೆಂದು ಒತ್ತಾಯಿಸಿದರು. ರಸ್ತೆ ತಡೆ ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಪೊಲೀಸ್ ಅಧಿಕಾರಿಗಳು ಕೋರಿಕೊಂಡರೂ ಪಟ್ಟು ಬಿಡದ ಪ್ರತಿಭಟನಾಕಾರರು ಎಸ್‍ಪಿ ಬರಬೇಕೆಂದು ಒತ್ತಾಯಿಸಿದರು. ನಂತರ ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವಿನಯ್ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆ ತನಿಖೆಗೆ ಕೊಡಗು ಪೊಲೀಸರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದರು. ನಂತರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಿಂದ ಹಿಂದೆ ಸರಿದರು.
ಬಿಜೆಪಿ ಪ್ರಮುಖರಾದ ರಾಬಿನ್ ದೇವಯ್ಯ, ಅನಿತಾ ಪೂವಯ್ಯ, ಮಹೇಶ್ ಜೈನಿ, ಅರುಣ್ ಶೆಟ್ಟಿ, ಕವನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.