ವಿರಾಜಪೇಟೆ, ಕುಶಾಲನಗರ, ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ದಿನೇಶ್ ಗುಂಡೂರಾವ್

KannadaprabhaNewsNetwork |  
Published : Sep 25, 2025, 01:02 AM IST
ಚಿತ್ರ : 23ಎಂಡಿಕೆ1 : ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಭೇಟಿ ನೀಡಿದರು.  | Kannada Prabha

ಸಾರಾಂಶ

ಸುಮಾರು 105 ಕೋಟಿ ರು. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ, ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಹಾಗೂ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರ ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಹಾಗೂ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ವೀಕ್ಷಣೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಬಜೆಟ್ ಸಂದರ್ಭದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು ಎಂದು ಪ್ರಕಟಿಸಲಾಗಿತ್ತು. ಹಾಗೆಯೇ ಪೊನ್ನಂಪೇಟೆ ಮತ್ತು ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಉದ್ದೇಶವಾಗಿತ್ತು. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಹಾಗೂ ಹುದಿಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಸಚಿವರು ಹೇಳಿದರು. ‘ವಿರಾಜಪೇಟೆಯಲ್ಲಿ 400 ಹಾಸಿಗೆ ಆಸ್ಪತ್ರೆ ನಿರ್ಮಿಸುವ ಉದ್ದೇಶವಾಗಿತ್ತು. ಸದ್ಯ 250 ಹಾಸಿಗೆಯ ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು, ವೈದ್ಯರು ಹಾಗೂ ಶುಶ್ರೂಷಕರು ಸೇರಿದಂತೆ ಸಿಬ್ಬಂದಿಗಳ ವಸತಿ ಗೃಹವನ್ನು ಸಹ ನಿರ್ಮಿಸಲಾಗುತ್ತಿದೆ. ಸುಮಾರು 105 ಕೋಟಿ ರು. ವೆಚ್ಚದಲ್ಲಿ ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಅವರು ಮಾಹಿತಿ ನೀಡಿದರು. ಹುದಿಕೇರಿಯಲ್ಲಿ ಸುಮಾರು 6 ಕೋಟಿ ರು.. ವೆಚ್ಚದಲ್ಲಿ 30 ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಹಾಗೆಯೇ ಕುಶಾಲನಗರದಲ್ಲಿ 40 ಕೋಟಿ ರು. ವೆಚ್ಚದಲ್ಲಿ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.’ಮುಂದಿನ ವಾರ ಟೆಂಡರ್:

ವಸತಿ ಗೃಹ ನಿರ್ಮಾಣ ಸೇರಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ವಾರ ಟೆಂಡರ್ ಆಹ್ವಾನಿಸಲಾಗುವುದು. ಜೊತೆಗೆ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ವಿರಾಜಪೇಟೆ, ಹುದಿಕೇರಿ ಮತ್ತು ಕುಶಾಲನಗರ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಸಂಬಂಧ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು. ಸ್ಥಳೀಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ವಿರಾಜಪೇಟೆ ಕ್ಷೇತ್ರದ ಆಸ್ಪತ್ರೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ನಾನು ಸಹ ಇದೇ ಜಿಲ್ಲೆಯವನಾಗಿರುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಕೈಜೋಡಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಅವರು ಹೇಳಿದರು. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಸರ್ಕಾರದ ಆಶಯ:

ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು. ಬಡ ಜನರಿಗೆ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಅಂಕಿ ಅಂಶಗಳು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ. ಅದನ್ನು ಬಿಟ್ಟು ಅಪಸ್ವರ ತೆಗೆಯುವುದು ಸರಿಯಲ್ಲ. ಅನುಮಾನ ಇದ್ದಲ್ಲಿ ಮಾಹಿತಿ ನೀಡಬಹುದಾಗಿದೆ. ಅದನ್ನು ಬಿಟ್ಟು ಗೊಂದಲ ನಿರ್ಮಾಣ ಮಾಡುವುದು ಬೇಡ ಎಂದರು. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮಾತನಾಡಿ, ಚುನಾವಣಾ ಸಂದರ್ಭದಲ್ಲಿಯೇ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂದು ಪ್ರಕಟಿಸಲಾಗಿತ್ತು. ಅದರಂತೆ ಈಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಹೇಳಿದರು.ಹಾಗೆಯೇ ಹುದಿಕೇರಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ತಾಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಪ್ರತ್ಯೇಕ ಪ್ರಣಾಳಿಕೆಯಲ್ಲಿ ಪ್ರಕಟಿಸಲಾಗಿತ್ತು, ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಮತ್ತು ಸಚಿವರು ಸ್ಪಂದಿಸಿದ್ದಾರೆ. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. ಶೀಘ್ರ ಕಾಮಗಾರಿ ಆರಂಭ

ಒಳ್ಳೆಯ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಹೇಳಿದರು. ಸಚಿವರಾದ ದಿನೇಶ್ ಗುಂಡೂರಾವ್ ಅವರು ವಿರಾಜಪೇಟೆಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಕ್ಷೇಮ ವಿಚಾರಿಸಿದರು. ತೀವ್ರ ನಿಗಾ ಘಟಕ ಸೇರಿದಂತೆ ವಿವಿಧ ವಿಭಾಗಗಳಿಗೆ ತೆರಳಿ ಪರಿಶೀಲಿಸಿದರು. ಬಡ ಜನರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವಂತೆ ವೈದ್ಯರಿಗೆ ಸೂಚಿಸಿದರು. ಎಂಜಿನಿಯರ್‌ಗಳ ಜೊತೆ ಜಾಗ ಪರಿಶೀಲಿಸಿದರು. ಬಳಿಕ ಹುದಿಕೇರಿಯಲ್ಲಿ ನಿರ್ಮಾಣವಾಗುವ ಸಮುದಾಯ ಆರೋಗ್ಯ ಕೇಂದ್ರ ಸ್ಥಳ ವೀಕ್ಷಿಸಿದರು. ನಗರದ ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ತಾಲೂಕು ಆಸ್ಪತ್ರೆಯ ಸ್ಥಳ ವೀಕ್ಷಣೆ ಮಾಡಿದರು. ಬಳಿಕ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಆನಂದ್, ಡಾ.ಸನತ್ ಕುಮಾರ್, ಡಾ.ಮದುಸೂದನ್, ತಾಲೂಕು ವೈದ್ಯಾಧಿಕಾರಿಗಳಾದ ಡಾ.ಸಿಂಪಿ, ಡಾ.ಯತೀಶ್ ಕುಮಾರ್, ವಿರಾಜಪೇಟೆ ಪುರಸಭೆ ಅಧ್ಯಕ್ಷರಾದ ಮನೆಯಪಂಡ ದೇಚಮ್ಮ ಕಾಳಪ್ಪ, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ