ತಾತ್ವಿಕ ಮೌಲ್ಯ ಪ್ರತಿಪಾದಿಸಿದ್ದ ವಿಶ್ವಗುರು ಬಸವಣ್ಣ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

KannadaprabhaNewsNetwork |  
Published : Feb 18, 2024, 01:35 AM IST
ಯಾದಗಿರಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರು ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿದರು. | Kannada Prabha

ಸಾರಾಂಶ

ಯಾದಗಿರಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಬಸವಣ್ಣನವರ ನೇತೃತ್ವದಲ್ಲಿ ಜಾತಿ, ಭೇದ ಮತ್ತು ಲಿಂಗ ತಾರತಮ್ಯವಿಲ್ಲದ ಸಮಾಜವನ್ನು ರೂಪಿಸುವ ಕೆಲಸ ನಡೆಯಿತು. ಭಾರತದ ಸಂವಿಧಾನವು ಇದನ್ನೇ ಎತ್ತಿ ಹಿಡಿದಿದೆ. ಅಲ್ಲದೆ, ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ತಾತ್ವಿಕ ಮೌಲ್ಯಗಳನ್ನೂ ಬಸವಣ್ಣ ಪ್ರತಿಪಾದಿಸಿದ್ದರು ಎಂದು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯದ ಹರಿಕಾರ ಜಗಜ್ಯೋತಿ ಬಸವಣ್ಣ ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಸಾಂಸ್ಕೃತಿಕ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು, ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ 12ನೇ ಶತಮಾನದಲ್ಲಿ ಕಾಯಕ ಜೀವಿಗಳ ಚಳವಳಿಯ ಮೂಲಕ ಸಾಮಾಜಿಕ ಕ್ರಾಂತಿಯನ್ನೇ ನಡೆಸಿ, ವಚನಗಳ ಮೂಲಕ ಜಾಗೃತಿ ಮೂಡಿಸಿದ ಜಗಜ್ಯೋತಿ ಬಸವೇಶ್ವರರು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದರು.

ಅವರು ವಿಶ್ವ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ್ದ ಮಹಾನ್ ವ್ಯಕ್ತಿ ಆಗಿರುವುದರಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ರಾಜ್ಯ ಸರ್ಕಾರ ಘೋಷಿಸಿದೆ ಎಂದರು.

ಕ್ರಾಂತಿಯೋಗಿ, ಭಕ್ತಿ ಭಂಡಾರಿ, ಮಹಾ ಮಾನವತಾವಾದಿ ಬಸವಣ್ಣನವರ ವಚನ ಸಾಹಿತ್ಯವು ವಿಶ್ವಶ್ರೇಷ್ಠ ಸಾಹಿತ್ಯವಾಗಿದೆ. ಬಸವಣ್ಣನವರ ವಚನ ಮತ್ತು ಸಂವಿಧಾನ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ವಚನಗಳಲ್ಲಿರುವ ಅಂಶಗಳು ಸಂವಿಧಾನದಲ್ಲಿವೆ ಎಂದರು.

ಬಸವಣ್ಣನವರ ವಚನಗಳು ಸರ್ವರಿಗೂ ಸಮಬಾಳು, ಸಮಪಾಲು ಎಂಬುದನ್ನು ಸಾರುತ್ತದೆ. ಸಮಾಜದಲ್ಲಿ ಬೇರೂರಿದ್ದ ಮೂಢನಂಬಿಕೆ, ಪುರುಷ ಮಹಿಳೆಯರ ಅಸಮಾನತೆಯನ್ನು ವಿರೋಧಿಸಿ ಬಸವಣ್ಣ ಚಿಕ್ಕವಯಸ್ಸಿನಲ್ಲೇ ಮನೆಯಿಂದ ಹೊರಗಡೆ ಹೋಗಿರುವುದನ್ನು ನಾವು ಸ್ಮರಿಸಬಹುದಾಗಿದೆ ಎಂದರು.

ಬಸವೇಶ್ವರವರ ಬದುಕು ಮತ್ತು ಸಾಧನೆ ಹಾಗೂ ಸಾಮಾಜಿಕ ಹೋರಾಟದ ಜೀವನ ಯುವ ಸಮುದಾಯಕ್ಕೆ ಮಾದರಿಯಾಗಿದೆ. ನಾವೆಲ್ಲರೂ ಕೂಡ ಸುಭದ್ರ ಸುಸಂಸ್ಕೃತ ಅಭಿವೃದ್ಧಿ ಹೊಂದಿದ ನಾಡು ರೂಪಿಸಲು ಶ್ರಮಿಸೋಣ ಎಂದರು.

ಸರಕಾರಿ ಪ್ರಥಮ ದರ್ಜೆ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಅವರು ಮಾತನಾಡಿ, ರಾಜ್ಯ ಸರ್ಕಾರವು ಬಸವಣ್ಣನವರನ್ನು ಸಾಂಸ್ಕೃತಿಕ ಘೋಷಿಸಿರುವುದು, ಕನ್ನಡ ನಾಡಿಗೆ ಸಂಭ್ರಮ ತಂದಿದೆ ಎಂದರು.

ಜಿಲ್ಲಾಧಿಕಾರಿ ಡಾ. ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರೀಮಾ ಪನ್ವಾರ, ಡಿ.ಎಸ್.ಪಿ ಅರುಣಕುಮಾರ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಸೋಮಶೇಖರ ಮಣ್ಣೂರ್ ಇತರರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಸ್ವಾಗತಿಸಿದರು. ಅಂಬೇಡ್ಕರ್ ಅಭಿವೃದ್ಧಿ ನಿಗಮ ವ್ಯವಸ್ಥಾಪಕರಾದ ನಿರೂಪಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ ವಂದಿಸಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ