ಸ್ಪರ್ಶ ಜ್ಞಾನವಿಲ್ಲದ ಮಚ್ಚೆ ಕಂಡುಬಂದಲ್ಲಿ ಆಸ್ಪತ್ರೆಗೆ ಭೇಟಿ ನೀಡಿ: ಮೇಯರ್‌

KannadaprabhaNewsNetwork |  
Published : Jul 31, 2024, 01:05 AM IST
ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನಕ್ಕೆ ಬಳ್ಳಾರಿ ಮೇಯರ್ ಮುಲ್ಲಂಗಿ ನಂದೀಶ್ ಅವರು  ಚಾಲನೆ ನೀಡಿದರು.  | Kannada Prabha

ಸಾರಾಂಶ

ಅಗತ್ಯವೆನಿಸಿದರೆ ಜಿಲ್ಲಾಸ್ಪತ್ರೆ ಹಾಗೂ ವಿಜಯನಗರ ವೈದೈಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ತಜ್ಞ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಲು ಕಳುಹಿಸಲಾಗುವುದು.

ಬಳ್ಳಾರಿ: ಚರ್ಮದ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಅಥವಾ ಮುಖದಲ್ಲಿ ಗಂಟುಗಳು, ಕಿವಿಯ ಮೇಲೆ ಗಂಟುಗಳು ಕಂಡುಬಂದಲ್ಲಿ ಇವು ಕುಷ್ಠರೋಗದ ಚಿಹ್ನೆಗಳಾಗಿರಬಹುದು. ತಪ್ಪದೇ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ 38ನೇ ವಾರ್ಡ್‌ ನ ಕಾರ್ಕನ ಮಸೀದಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಆಂದೋಲನ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೊಸದಾಗಿ ಕುಷ್ಠರೋಗ ಪ್ರಕರಣಗಳಿಗೆ ಉಂಟಾಗುವ ಅಂಗವಿಕಲತೆಯನ್ನು ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪತ್ತೆ ಹಚ್ಚಲು ಜು.29ರಿಂದ ಆ.14ರವರೆಗೆ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವಕರು ಮನೆ ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ಕೋರಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ಜಿ. ವೀರೇಂದ್ರಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪುರುಷ ಮತ್ತು ಮಹಿಳಾ ಸ್ವಯಂಸೇವಕರು ಮನೆ-ಮನೆ ಭೇಟಿ ಮಾಡಿ ಕುಷ್ಠರೋಗದ ಬಗ್ಗೆ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ಮನೆಯಲ್ಲಿರುವ 2 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನು ತಪಾಸಣೆ ಕೈಗೊಂಡು ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಅವರಿಗೆ ರೆಫರಲ್ ಫಾರಂ ನೀಡಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಸಾರ್ವಜನಿಕ ಆಸ್ಪತ್ರೆ, ಒಂದು ವೇಳೆ ಅಗತ್ಯವೆನಿಸಿದರೆ ಜಿಲ್ಲಾಸ್ಪತ್ರೆ ಹಾಗೂ ವಿಜಯನಗರ ವೈದೈಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯ ತಜ್ಞ ವೈದ್ಯರ ಹತ್ತಿರ ತಪಾಸಣೆ ಮಾಡಿಸಿಕೊಳ್ಳಲು ಕಳುಹಿಸಲಾಗುವುದು. ಖಚಿತಪಟ್ಟಲ್ಲಿ ರೋಗಿಯ ಮೈಮೇಲೆ ಚಿಹ್ನೆಗಳು ಅಥವಾ ವೈದ್ಯರ ನಿರ್ಧರಿಸಿದಂತೆ 6 ತಿಂಗಳಿನಿಂದ 1 ವರ್ಷದ ಚಿಕಿತ್ಸೆ ನೀಡಲಾಗುವುದು. ಚಿಕಿತ್ಸೆ ಪೂರ್ಣಗೊಂಡಲ್ಲಿ ರೋಗ ಸಂಪೂರ್ಣ ಗುಣವಾಗವುದು ಯಾವುದೇ ಆತಂಕ ಬೇಡ ಎಂದು ಅವರು ತಿಳಿಸಿದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್.ದಾಸಪ್ಪನವರ್, ವೈದ್ಯಾಧಿಕಾರಿ ಡಾ.ಸುಧಾರಾಣಿ, ಡಿಎಫ್‌ಐಟಿ ಸಂಯೋಜಕ ಸುಧಾಕರ್, ಕುಷ್ಠರೋಗ ವಿಭಾಗದ ಸುಮನ್, ಮಾನಪ್ಪ, ಎನ್.ಪಂಪಯ್ಯಸ್ವಾಮಿ, ಬಳ್ಳಾರಿ ತಾಲೂಕು ಮೇಲ್ವಿಚಾರಕ ಮುಸ್ತಾಕ್ ಅಹಮದ್ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ