ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

KannadaprabhaNewsNetwork |  
Published : Jul 21, 2024, 01:15 AM IST
ಚಿತ್ರ :  20ಎಂಡಿಕೆ2 : ಕರಡಿಗೋಡು ಪ್ರವಾಹ ಪೀಡಿತ ಸ್ಥಳಕ್ಕೆ ಉಸ್ತುವಾರಿ ಸಚಿವ ಭೋಸರಾಜು ಭೇಟಿ ನೀಡಿದರು.  | Kannada Prabha

ಸಾರಾಂಶ

ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು ಬೇಟಿ ನೀಡಿದರು. ಸಂತ್ರಸ್ತರ ಅಹವಾಲು ಆಲಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಎಸ್. ಭೋಸರಾಜು ಅವರು ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.

ಊಟೋಪಾಚಾರ, ಆರೋಗ್ಯ ಸೇವೆ ಇತರ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆಯೇ ಎಂದು ಮಾಹಿತಿ ಪಡೆದರು.

ಪ್ರವಾಹ ಪೀಡಿತ ಪ್ರದೇಶದಿಂದ ಸ್ಥಳಾಂತರವಾಗುತ್ತೀರ ಎಂದು ಕೇಳಿದರು.

ಇದಕ್ಕೆ ಪ್ರಕ್ರಿಯಿಸಿದ ಸಂತ್ರಸ್ತರು ಪ್ರತೀ ವರ್ಷ ಮಳೆಗಾಲ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಜೀವನ ನಡೆಸುವುದು ದುಸ್ತರವಾಗಿದೆ. ಬದುಕು ಕಟ್ಟಿಕೊಳ್ಳಲು ತುಂಬಾ ತೊಂದರೆಯಾಗಿದೆ. ಆದ್ದರಿಂದ ನಿವೇಶನ ಒದಗಿಸಿ ಸ್ಥಳಾಂತರಿಸುವಂತೆ ಕೋರಿದರು.

ಈ ಸಂದರ್ಭ ಮನೋರಂಜನೆಗಾಗಿ ಟಿ.ವಿ., ಆರೋಗ್ಯ ಸೇವೆ ಇತರೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸುವಂತೆ ತಹಸೀಲ್ದಾರರಿಗೆ ಸೂಚಿಸಿದರು. ಬಳಿಕ ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಅಲ್ಲಿನ ಸಂತ್ರಸ್ತರ ಅಹವಾಲು ಆಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಂತ್ರಸ್ತರಿಗೆ ನಿವೇಶನ ಒದಗಿಸುವ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಸಂತ್ರಸ್ತರಿಗೆ ವಸತಿ ಸೇರಿದಂತೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪಲು ಕೀರೆಹೊಳೆ, ಬಾಳೆಲೆ, ಹುದಿಕೇರಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.

ಪ್ರತಿ ಭಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.

ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಸೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.

-------------------------------------------

ಸಂತ್ರಸ್ತರಿಗೆ ಜಾಗ ಗುರುತು

ಮಡಿಕೇರಿ: ಕಾವೇರಿ ನದಿ ದಂಡೆಯಲ್ಲಿರುವವರಿಗೆ ಬದಲಿ ನಿವೇಶನ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಹೇಳಿದ್ದಾರೆ.

ಸಿದ್ದಾಪುರದ ಕರಡಿಗೋಡುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಹಲವೆಡೆ ಸಾಕಷ್ಟು ಸಮಸ್ಯೆಯಾಗಿದೆ. ಕೊಡಗಿನಲ್ಲೂ ಹಲವೆಡೆ ಸಮಸ್ಯೆ ಎದುರಾಗಿದೆ.

ತೀವ್ರವಾಗಿ ಹಾನಿಯಾಗಿರುವ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇನೆ. ಇಷ್ಟು ದಿನ ಅಧಿವೇಶದಲ್ಲಿ ಇದ್ದೆವು. ಆದರೂ ಜಿಲ್ಲಾಧಿಕಾರಿಗಳಿಂದ ನಿತ್ಯ ಮಾಹಿತಿ ಪಡೆದುಕೊಳ್ಳುತ್ತಿದೆ. ಎಲ್ಲ ರೀತಿಯ ನಿರ್ವಹಣೆಗೆ ತಾಲೂಕು ಆಡಳಿತಕ್ಕೂ ಸ್ಪಷ್ಟ ಸೂಚನೆ ಕೊಟ್ಟಿದ್ದೇನೆ ಎಂದು ತಿಳಿಸಿದರು.

30 ವರ್ಷಗಳಿಂದ ಇವರು ಇಲ್ಲಿದ್ದಾರೆ, ಈಗಾಗಲೇ ವಿವಿಧೆಡೆ ಜಾಗಗಳನ್ನು ಗುರುತಿಸಲಾಗಿದೆ.

ಜಾಗಗಳನ್ನು ಖರೀದಿ ನಿವೇಶನ ನೀಡಲಾಗುವುದು. ಸ್ಥಳಾಂತರ ಮಾಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಸದ್ಯ ಪ್ರವಾಹ ಪೀಡಿತರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ