ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ವಿಶೇಷವಾಗಿ ಈ ಬಾರಿ ನಾಲ್ಕು ವಿಭಾಗಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಯುವಜನತೆಯ ಮುಂದಿನ ವೃತ್ತಿ ಜೀವನಕ್ಕೆ ಅನುಕೂಲವಾಗುವಂತಹ ಮಾರ್ಗದರ್ಶನ ಕಾರ್ಯಕ್ರಮಗಳು, ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳು ಜೊತೆಗೆ ಕನ್ನಡ ಭಾಷೆ, ಸಾಹಿತ್ಯದ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
ತಾಲೂಕು ಮಟ್ಟದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಬರುವ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ವಾಲಿಬಾಲ್, ಕಬಡ್ಡಿ, ಚೆಸ್, ಅಥ್ಲೆಟಿಕ್ಸ್ ಹಾಗೂ ಸಾಂಸ್ಕೃತಿಕ ವಿಭಾಗದಲ್ಲಿ ಚಿತ್ರಕಲೆ, ಗೀತಗಾಯನ ಮತ್ತು ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಿ ಅಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.ಎಲ್ಲಾ ತಾಲೂಕುಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಪದವಿ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ, ಮಾದಕ ವಸ್ತುಗಳ ದುಷ್ಪರಿಣಾಮ, ಸೈಬರ್ ಕ್ರೈಂ ಸೇರಿದಂತೆ ವಿವಿಧ ವಿಷಯ ಕುರಿತು ಕಾರ್ಯಾಗಾರ, ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತಿಳಿಸಿದ ಅವರು, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯು ಕಲ್ಯಾಣ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ನಿಗದಿತ ದಿನಾಂಕಗಳಂದು ಸ್ಪರ್ಧೆಗಳು ಮತ್ತು ಕಾರ್ಯಾಗಾರ ನಡೆಸುವಲ್ಲಿ ಭಾಗಿಯಾಗಬೇಕು. ಹಾಗೂ ಜಯಂತಿ ಯಶಸ್ಸಿಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಜಿ.ಪಂ ಸಿಇಓ ಎನ್.ಹೇಮಂತ್ ಮಾತನಾಡಿ, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಎಲ್ಲ ತಾಲೂಕುಗಳ ವಸತಿಶಾಲೆಗಳ ವಿದ್ಯಾರ್ಥಿಗಳು ಹಾಗೂ ಸರ್ಕಾರಿ ಮತ್ತು ಅನುದಾನಿತ ಪದವಿ ವಿದ್ಯಾರ್ಥಿಗಳಿಗೆ ಪ್ರೊಬೇಷನರಿ ಅಧಿಕಾರಿಗಳು, ಸಂಪನ್ಮೂಲ ವ್ಯಕ್ತಿಗಳಿಂದ ಸಿವಿಲ್ ಸರ್ವಿಸಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಕೆರಿಯರ್ ಮಾರ್ಗದರ್ಶನವನ್ನು ನೀಡಲಾಗುವುದು. ತಾಲೂಕುಗಳಿಗೆ ಖುದ್ದು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ತಾವೂ ಸಹ ಭೇಟಿ ನೀಡಿ, ಕೆರಿಯರ್ ಮಾರ್ಗದರ್ಶನದಲ್ಲಿ ಪಾಲ್ಗೊಳ್ಳುತ್ತೇವೆ. ಜ.12ರಂದು ಕುವೆಂಪು ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮದಲ್ಲಿಯೂ ವೃತ್ತಿ ಮಾರ್ಗದರ್ಶನ ಮತ್ತು ಮಾದಕ ವಸ್ತು ದುಷ್ಪರಿಣಾಮ, ಸೈಬರ್ ಕ್ರೈಂ ಮತ್ತು ಇತರೆ ವಿಷಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಸಲಾಗುವುದು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಪ್ರತಿ ತಾಲೂಕುಗಳಲ್ಲಿ ನಿಗದಿತ ದಿನಾಂಕಗಳಂದು ವಸತಿಶಾಲೆಗಳ ಪಿಯು ಮತ್ತು ಪದವಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಬಳಸಿದರೆ ಆಗುವ ದುಷ್ಪರಿಣಾಮಗಳು, ಸೈಬರ್ ಕ್ರೈಂ ಮತ್ತು ಇತರೆ ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಾಗಾರಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.