ಮೊಬೈಲ್‌ ನಿಂದ ದೂರವಿದ್ದು, ಓದುವ ಹವ್ಯಾಸ ಬೆಳೆಸಿಕೊಳ್ಳಿ

KannadaprabhaNewsNetwork |  
Published : Jul 27, 2026, 02:15 AM IST
1 | Kannada Prabha

ಸಾರಾಂಶ

ಪೋಷಕರು ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವ ಮೂಲಕ ಮನೆಯಲ್ಲಿ ಓದುವ ವಾತಾವರಣ ನಿರ್ಮಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಮಯವನ್ನು ಮೊಬೈಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಳೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದ ದೂರವಿದ್ದು, ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಕೆ. ವಿವೇಕಾನಂದ ಸಲಹೆ ನೀಡಿದರು.

ನಗರದ ಜಯಲಕ್ಷ್ಮೀಪುರಂನಲ್ಲಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2026- 27ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.

ಪೋಷಕರು ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವ ಮೂಲಕ ಮನೆಯಲ್ಲಿ ಓದುವ ವಾತಾವರಣ ನಿರ್ಮಿಸಬೇಕು. ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಪುಸ್ತಕಗಳ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಮಾಡಬೇಕಿದೆ. ತಂತ್ರಜ್ಞಾನವನ್ನು ಅಗತ್ಯಕ್ಕೆ ತಕ್ಕಂತೆ ಬಳಸಬೇಕೆ ಹೊರತು, ಅದರ ದಾಸರಾಗಬಾರದು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡರೆ ಮಾತ್ರ ಭವಿಷ್ಯ ಉಜ್ವಲವಾಗಲಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು ಸಮಯದ ಮಹತ್ವ ಅರಿತು ಶಿಸ್ತು, ಪರಿಶ್ರಮ ಮತ್ತು ನಿರಂತರ ಅಧ್ಯಯನದ ಮೂಲಕ ತಮ್ಮ ಗುರಿ ಸಾಧನೆಗೆ ಮುಂದಾಗಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡರೆ ಸಮಾಜಕ್ಕೂ, ದೇಶಕ್ಕೂ ಕೊಡುಗೆ ನೀಡುವ ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯ ಎಂದರು.

ಜ್ಞಾನ ವೃದ್ಧಿಯ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು. ಹಿರಿಯರಿಗೆ ಗೌರವ ನೀಡುವುದು, ಶಿಕ್ಷಕರ ಮಾರ್ಗದರ್ಶನ ಪಾಲಿಸುವುದು ಹಾಗೂ ಸಮಾಜದ ಒಳಿತಿಗಾಗಿ ಕೆಲಸ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಹೊಂದಿ ನಿರಂತರ ಪರಿಶ್ರಮದೊಂದಿಗೆ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕು. ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿಯುತ ನಾಗರಿಕರಾಗಿ ಬೆಳೆದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಆದರ್ಶ ಜೀವನ ನಡೆಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಎಂ.ಪಿ. ನಾಗಮ್ಮ, ಕುವೆಂಪು ವಿದ್ಯಾವರ್ಧಕ ಟ್ರಸ್ಟ್ ಅಧ್ಯಕ್ಷ ಡಾ.ಜೆ. ಶಶಿಧರ ಪ್ರಸಾದ್‌, ಕುವೆಂಪು ವಿದ್ಯಾಪರಿಷತ್‌ ಅಧ್ಯಕ್ಷ ಡಾ.ಡಿ.ಕೆ. ರಾಜೇಂದ್ರ, ಕಾಲೇಜಿನ ಪ್ರಾಂಶುಪಾಲ ಎಂ. ವೆಂಕಟೇಶ್‌ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಷಮುಕ್ತ ಬೇಸಾಯದಿಂದಲೇ ರೈತನಿಗೆ ಕೃಷಿಯಲ್ಲಿ ನೆಮ್ಮದಿ
ಶ್ರೀಶೈಲೇಶ್ವರ ವಿದ್ಯಾಕೇಂದ್ರದಲ್ಲಿ ಕಾರ್ಗಿಲ್ ವಿಜಯ್ ದಿವಸ್