ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯ ಪ್ರತಿಯೊಬ್ಬರು ಏ.26 ರಂದು ಪ್ರಬುದ್ಧ ಮತದಾರರಾಗಿ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ತಿಳಿಸಿದರು.ನಗರದ ರೋಟರಿ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಫ್ ಸಮಿತಿ ವತಿಯಿಂದ ನಡೆದ ಜಿಲ್ಲಾಮಟ್ಟದ ‘ನಮ್ಮ ನಡೆ ಮತಗಟ್ಟೆಯ ಕಡೆ’ ಎಂಬ ಚುನಾವಣಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಬುದ್ದಿವಂತ ಹಾಗೂ ಪ್ರಜ್ಞಾವಂತ ಮತದಾರರು ಮನೆಯಲ್ಲಿ ಉಳಿಯದೇ ಏ.26 ರಂದು ಮನೆಯಿಂದ ಹೊರಗೆ ಬಂದು ತಮ್ಮ ಅಮೂಲ್ಯ ಹಾಗೂ ನೈತಿಕ ಮತವನ್ನು ಚಲಾಯಿಸುವ ಮೂಲಕ ಪ್ರಜಾಸತ್ತಾತ್ಮಕ ಮೌಲ್ಯವನ್ನು ಎತ್ತಿಹಿಡಿಯಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್ ಮಾತನಾಡಿ, ಚುನಾವಣೆಯನ್ನು ಸುಲಲಿತ ಹಾಗೂ ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಎಲ್ಲರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಾಗುವುದು. ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಹಿನ್ನೆಲೆ ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಗೆ ದ್ವಿತೀಯ ಸ್ಥಾನ ಸಿಕ್ಕಿತ್ತು. ಈ ಬಾರಿ ಪ್ರಥಮ ಸ್ಥಾನವನ್ನು ಪಡೆಯುವ ಅಪೇಕ್ಷೆ ಜಿಲ್ಲೆಯ ಮತದಾರರ ಮೇಲಿದೆ ಎಂದು ಹೇಳಿದರು.
ಜಿಲ್ಲಾ ಎಸ್ಪಿ ಎನ್. ಯತೀಶ್ ಮತದಾನ ಮಾಡುವುದು, ಮಹತ್ವದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು.ಬೈಕ್ ಹಾಗೂ ಸೈಕಲ್ ಜಾಥಾಗೆ ಚಾಲನೆ:
ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ಎಚ್. ಎಲ್. ನಾಗರಾಜು ರೋಟರಿ ಸಂಸ್ಥೆ ಮುಂಭಾಗದಿಂದ ಸೈಕಲ್ ತುಳಿಯುವ ಮೂಲಕ ಬೈಕ್ ಹಾಗೂ ಸೈಕಲ್ ಜಾಥಾಗೆ ಚಾಲನೆ ನೀಡಿದರು.ಜಾಥಾವು ಬೆಂಗಳೂರು - ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಯವರ ಕಚೇರಿ ಆವರಣದವರೆಗೆ ಸಾಗಿತು, ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಏ.26ರಂದು ತಪ್ಪದೇ ಮತ ಚಲಾಯಿಸುವಂತೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ, ರೋಟರಿ ವಿದ್ಯಾ ಸಂಸ್ಥೆ ಅಧ್ಯಕ್ಷ ಪ್ರಭಾಕರ್, ಜಿಪಂ ಉಪ ಕಾರ್ಯದರ್ಶಿ ಎಂ. ಬಾಬು, ಯೋಜನಾ ನಿರ್ದೇಶಕ ಸಂಜೀವಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.