ಕನ್ನಡಪ್ರಭ ವಾರ್ತೆ ವಿಜಯಪುರ
ದೇಶದ ಅಭ್ಯುದಯಕ್ಕೆ ಎಲ್ಲ ಅರ್ಹ ಮತದಾರರು ಮತದಾನದ ಹಕ್ಕು ಚಲಾಯಿಸಬೇಕು. ಸಂವಿಧಾನ ಕಲ್ಪಿಸಿದ ಮತದಾನದಿಂದ ಯಾರೂ ವಂಚಿತರಾಗದೇ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. 18 ವರ್ಷ ಪೂರೈಸಿದ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ಪ್ರತಿಯೊಬ್ಬರು ಮತದಾನದಿಂದ ದೂರ ಉಳಿಯದೇ ಮತ ಚಲಾಯಿಸಬೇಕು. ನಗರ ಪ್ರದೇಶದ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕು. ಮತದಾರರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮತದಾರರ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಸ್ವೀಪ್ ಸಮಿತಿ ವತಿಯಿಂದ ಮತದಾನದ ಮಹತ್ವ ಸಾರುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ವಿವರಸಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮತದಾರ ಪ್ರತಿಜ್ಞಾವಿಧಿ ಬೋಧಿಸಿ, ಮಾತನಾಡಿ, ೨೦೧೧ರಿಂದ ದೇಶಾದ್ಯಂತ ರಾಷ್ಟ್ರೀಯ ಮತದಾನ ದಿನವನ್ನು ಆಚರಿಸಲಾಗುತ್ತಿದೆ. ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬುದು ಧ್ಯೇಯವಾಕ್ಯದೊಂದಿಗೆ ಮತದಾರ ದಿನ ಆಚರಿಸಲಾಗುತ್ತಿದೆ ಎಂದರು.
ಮತದಾನ ಮಹತ್ವವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು. ಹಲವು ಕಾರ್ಯಚಟುವಟಿಕೆಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ವಿಶೇಷ ಸಂಕ್ಷಿಪ್ತ ಮತದಾರ ಪಟ್ಟಿ ಪರಿಷ್ಕರಣೆ ೨೦೨೪ರ ಅಂತಿಮ ಮತದಾರ ಪಟ್ಟಿಯಂತೆ ಜಿಲ್ಲೆಯಲ್ಲಿ ೧೯,೧೯,೦೪೮ ಮತದಾರರಿದ್ದು, ಇದರಲ್ಲಿ ೯,೭೬,೦೭೩ ಪುರುಷ, ೯,೪೨,೭೫೭ ಮಹಿಳಾ ಮತದಾರರಿದ್ದಾರೆ ಎಂದು ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೋನಾವಣೆ ಮಾತನಾಡಿ, ನಮಗೆ ದೊರಕಿದ ಮತದಾನದ ಕರ್ತವ್ಯವನ್ನು ಮತದಾನ ಮಾಡುವ ಮೂಲಕ ನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಥಮವಾಗಿ ಮತದಾನದ ಹಕ್ಕನ್ನು ಪಡೆದ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಿಸಲಾಯಿತು. ಜಿಲ್ಲಾಮಟ್ಟದ ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದ ಪ್ರೌಢಶಾಲೆ, ಪದವಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದ ಸಂಪೂರ್ಣ ವಿವರನ್ನು ವಿಶೇಷಚೇತನರಿಗೆ ಸಂಜ್ಞೆ ಭಾಷೆಯ ಮೂಲಕ ರಾಚಯ್ಯ ಮಠಪತಿ ತಿಳಿಸಿಕೊಟ್ಟರು. ಎಂ.ಬಿ.ರಜಪೂತ ವಿಶೇಷ ಉಪನ್ಯಾಸ ನೀಡಿದರು.ಪ್ರೊಬೇಷನರಿ ಐಪಿಎಸ್ ಅಧಿಕಾರಿ ಶಾಲು, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ ಸೇರಿದಂತೆ ಮುಂತಾದವರು ಇದ್ದರು.