ಮೇ 7ರಂದು ತಪ್ಪದೇ ಮತದಾನ ಮಾಡಿ: ನ್ಯಾ.ರಾಜೇಶ್ವರಿ ಹೆಗಡೆ ಮನವಿ

KannadaprabhaNewsNetwork | Published : Apr 9, 2024 12:47 AM

ಸಾರಾಂಶ

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಅಧಿಕಾರವಿದೆ. ನಾಯಕನ ಆಯ್ಕೆ ಮಾಡಲು ಮೇ 7ರಂದು ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಅಧಿಕಾರವಿದೆ. ನಾಯಕನ ಆಯ್ಕೆ ಮಾಡಲು ಮೇ 7ರಂದು ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.

ನಗರದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನ ಆಗುವುದೇ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮತದಾನವಾಗಿದೆ. ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಭಾರತೀಯರು ತಮ್ಮ ಮತಹಕ್ಕನ್ನು ಚಲಾಯಿಸಬೇಕು ಎಂದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮಾತನಾಡಿ, ವಿಶ್ವದಲ್ಲಿ 195 ದೇಶಗಳಿವೆ, ಅದರಲ್ಲಿ ಭಾರತ ಅತಿ ದೊಡ್ಡ, ಶಕ್ತಿಯುತ ಪ್ರಜಾಪ್ರಭುತ್ವ ಹೊಂದಿರುವ ದೇಶ. ಈ ಪ್ರಜಾಪ್ರಭುತ್ವವನ್ನು ನೀಡಿದ್ದು ಜನರೇ ಆಗಿದ್ದಾರೆ. ಸಂರಕ್ಷಣೆ ಮಾಡುವಂತಹ ಶಕ್ತಿ ಸಂವಿಧಾನಕ್ಕಿದೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ ಬಿ. ಇಟ್ನಾಳ್ ಮಾತನಾಡಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಪಾಲಿಕೆ ಆಯುಕ್ತರಾದ ರೇಣುಕಾ ಅವರಿಗೆ ಸನ್ಮಾನಿಸಲಾಯಿತು. ಮರಣ ಹೊಂದಿದ ವಕೀಲ ಕೊಟ್ರಯ್ಯ ಅವರ ಪತ್ನಿ ಪುಪ್ಪಾಲತಾ ಅವರಿಗೆ ₹1 ಲಕ್ಷದ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ವಿ.ವಿಜಯಾನಂದ್ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಅಧ್ಯಕ್ಷತೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಕೌಟುಂಬಿಕ ನ್ಯಾಯಾಲಯ ನ್ಯಾಯಾಧೀಶರಾದ ದಶರಥ, ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಸವರಾಜ್ ಗೋಪಾನಾಳ್, ಕಾರ್ಯದರ್ಶಿ ಎಸ್.ಬಸವರಾಜ್ ಮತ್ತು ಸಹ ಕಾರ್ಯದರ್ಶಿ ಮಂಜುನಾಥ ಉಪಸ್ಥಿತರಿದ್ದರು.

- - - -8ಕೆಡಿವಿಜಿ32ಃ:

ದಾವಣಗೆರೆ ಜಿಲ್ಲಾ ವಕೀಲರ ಭವನದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸಿದರು.

Share this article