ಕನ್ನಡಪ್ರಭ ವಾರ್ತೆ ನಾಗಮಂಗಲ
ಮತ ಕಳವು ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ನಡೆಸುತ್ತಿರುವ ಬಿಜೆಪಿ ವಿರುದ್ಧ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ತಾಲೂಕಿನಲ್ಲಿಯೂ ಬೂತ್ ಮಟ್ಟದಲ್ಲಿ ಜನಜಾಗೃತಿ ಮೂಡಿಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್ ತಿಳಿಸಿದರು.ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ವೋಟ್‌ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ಮತಗಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷದ ನಾಯಕರು ತಮಗಿಷ್ಟ ಬಂದಂತೆ ಮತಗಳನ್ನು ಹೆಚ್ಚಿಸಿಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸುವ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ದೂರಿದರು.
ಮತ ಕಳ್ಳತನ ನಡೆಸುತ್ತಿರುವ ಬಿಜೆಪಿ ಪಕ್ಷದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಳಾಗುತ್ತಿದೆ. ನಿಜವಾದ ಮತದಾರರ ಹಕ್ಕು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕಿದೆ. ಕೇಂದ್ರ ಚುನಾವಣಾ ಆಯೋಗ ಮುಂದಿನ ಚುನಾವಣೆಗಳಲ್ಲಿ ಈ ರೀತಿ ತಪ್ಪುಗಳು ಆಗದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶರತ್‌ರಾಮಣ್ಣ ಮಾತನಾಡಿ, ಮತ ಕಳವುವನ್ನು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರು ಪತ್ತೆ ಹಚ್ಚಿದ್ದಾರೆ. ಮತಗಳ ವ್ಯತ್ಯಾಸವನ್ನು ಆಂತರೀಕ ಅಧ್ಯಯನ ಮೂಲಕ ಸಾಕ್ಷಿ ಸಿಕ್ಕಿವೆ. ವೋಟ್ ಚೋರಿ ನಡೆಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತಿದೆ ಎಂದು ದೂರಿದರು.
ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯ ತಿಮ್ಮಪ್ಪ, ತಾಪಂ ಮಾಜಿ ಅಧ್ಯಕ್ಷರಾದ ನವೀನ್‌ಕುಮಾರ್, ಆರ್.ಕೃಷ್ಣೇಗೌಡ, ಕಾಂಗ್ರೆಸ್ ಮುಖಂಡರಾದ ಡಿ.ಕೃಷ್ಣೇಗೌಡ, ಎಂ.ನಾಗರಾಜಯ್ಯ, ಕೊಣನೂರು ಹನುಮಂತು, ಪ್ರಭಾಕರ್, ಎನ್.ಕೆ.ವಸಂತಮಣಿ, ಚಿಕ್ಕಮ್ಮ, ರವಿಕಾಂತೇಗೌಡ, ತ್ಯಾಪೇನಹಳ್ಳಿ ಶ್ರೀನಿವಾಸ್, ಎಲ್.ಕುಮಾರ್ ಸೇರಿದಂತೆ ಹಲವರು ಇದ್ದರು.