ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ
ಪ್ರಜಾಪ್ರಭುತ್ವ ಬುನಾದಿಯಲ್ಲಿ ವಿಶ್ವಾಸ ಪಾತ್ರವಾಗಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಭವ್ಯ ಬಲಿಷ್ಠ ಭಾರತ ನಿರ್ಮಾಣ ಮಾಡೋಣ ಎಂದು ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ಕರೆ ನೀಡಿದರು.
ನಗರಸಭೆ ಆವರಣದಲ್ಲಿ ಮಂಗಳವಾರ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಮತ ಹಾಕುವುದು ನಮ್ಮ ಹಕ್ಕು. ಈ ಹಕ್ಕಿನಿಂದಲೇ ದೇಶದ ಅಭಿವೃದ್ಧಿ ಸಾದ್ಯವಾಗುತ್ತದೆ ಎಂದು ಹೇಳಿದರು.ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆ ಏ.26 ರಂದು ನಡೆಯಲಿದೆ. ಈ ಚುನಾವಣೆಗೆ ಪೂರಕವಾಗಿ ಸಾರ್ವಜನಿಕ ಕ್ಷೇತ್ರಗಳಲ್ಲಿ ಮತದಾನ ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗುತ್ತಿದೆ. ಈ ಎಲ್ಲ ಕಾರ್ಯಕ್ರಮಗಳೊಂದಿಗೆ ಸರ್ಕಾರಿ ಕಚೇರಿ ಸಿಬ್ಬಂದಿ ಭಾಗವಹಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾಮಾಜಿಕ ಜಾಲ ತಾಣಗಳನ್ನು ಹೆಚ್ಚೆಚ್ಚು ಸದುಪಯೋಗ ಮಾಡಿಕೊಂಡು ಈ ಬಾರಿಯ ಲೋಕಸಭೆ ಚುನಾವಣೆ ಯಶಸ್ವಿಗೊಳಿಸಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಶ್ರಮ ವಹಿಸೋಣ ಎಂದರು.
ತಾಪಂ ಇಒ ಸುದರ್ಶನ್ ಮಾತನಾಡಿ, ಹಳ್ಳಿಗಳ ದೇಶವಾದ ಭಾರತದಲ್ಲಿ ಎಲ್ಲಾ ಚುನಾವಣೆಗಳು ತನ್ನದೇ ಮಹತ್ವ ಹೊಂದಿವೆ. ಗ್ರಾಮೀಣ ಪ್ರದೇಶಗಳಲ್ಲಿರುವ ಗ್ರಾಮ ಪಂಚಾಯಿತಿ ಮತ್ತು ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಏ.26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಜಾಗೃತಿ ಮೂಡಿಸಲು ಮನೆ ಮನೆಗೆ ಚೀಟಿ ಅಂಟಿಸಲಾಗುತ್ತಿದೆ. ಬಲಿಷ್ಠ ಭಾರತ ನಮ್ಮ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಪ್ರೋತ್ಸಾಹಿಸಲು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸ್ವಿಪ್ ಸಮಿತಿ ಕಾರ್ಯಕ್ರಮ ಆಯೋಜಕ ರಾಜಶೇಖರ್, ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಓಂಕಾರಪ್ಪ, ನಗರ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ವಿಷ್ಣುವರ್ಧನ್, ಆರೋಗ್ಯ ನಿರೀಕ್ಷಕ ಲಿಂಗರಾಜು, ನಗರಸಭೆ ಸಿಬ್ಬಂದಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.