ಹಾವೇರಿ: ಮತದಾನ ಸಂವಿಧಾನಿಕ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಸುಭದ್ರತೆಗೆ ೧೮ ವರ್ಷ ತುಂಬಿದ ದೇಶದ ಪ್ರತಿಯೊಬ್ಬ ಪ್ರಜೆಯೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿ, ಮತದಾನ ಪ್ರಕ್ರಿಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಹೇಳಿದರು.
ಮತದಾನದ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಕ್ಲಬ್‌ಗಳನ್ನು ರಚನೆ ಮಾಡಲಾಗಿದೆ. ಜಿಲ್ಲೆಯಲ್ಲಿ ೧೩.೧೦ ಲಕ್ಷ ಮತದಾರರಿದ್ದು, ಮತದಾರರ ಪಟ್ಟಿಯನ್ನು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ಈ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಲು ತಿಳಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವಾದಲ್ಲಿ ಕೂಡಲೇ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದರು.
ಯುವ ಸಮೂಹ ಗುರುತರ ಜವಾಬ್ದಾರಿಯಿಂದ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಹಾಗೂ ಕುಟುಂಬದವರಿಗೆ ಮತದಾನದ ಶ್ರೇಷ್ಠತೆ ಬಗ್ಗೆ ಅರಿವು ಮೂಡಿಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ. ೭೯.೬೦ರಷ್ಟು ಮತದಾನವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು.ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್ ಮಾತನಾಡಿ, ವಿದ್ಯಾರ್ಥಿಗಳು ಭಾರತ ದೇಶದ ಭಾವಿ ಪ್ರಜೆಗಳಾಗಿದ್ದು, ಮತದಾನ ಮಹತ್ವ ತಿಳಿದುಕೊಳ್ಳಬೇಕು. ೧೮ ವರ್ಷ ಪೂರೈಸಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾನದಲ್ಲಿ ಭಾಗವಹಿಸಬೇಕು ಎಂದರು.
ಬಹುಮಾನ ವಿತರಣೆ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ ಪ್ರಬಂಧ, ಭಿತ್ತಿಪತ್ರ ಒಳಗೊಂಡಂತೆ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಉಮೇಶಪ್ಪ ಎಚ್., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಉಪವಿಭಾಗಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಚನ್ನಪ್ಪ ಎಚ್.ಬಿ., ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ ಡಾ. ಎಲ್. ನಾಗರಾಜ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಮಮತಾ, ಅಬಕಾರಿ ಇಲಾಖೆ ಉಪ ಆಯುಕ್ತೆ ಶೈಲಜಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಕೃಷಿ ಇಲಾಖೆ ಉಪನಿರ್ದೇಶಕ ಹುಲಿರಾಜು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ, ಹಾವೇರಿ ಶಹರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಮೋತಿಲಾಲ್ ಪವಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.