ಮುಂಡರಗಿ: ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ ಬಿಜೆಪಿ ಮುಂಡರಗಿ ಮಂಡಲದ ವತಿಯಿಂದ ಬಿಜೆಪಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಹಾವೇರಿ ಜಿಲ್ಲೆಯಲ್ಲಿ 1649 ಆಸ್ತಿಗಳ ಹಕ್ಕಿಗಾಗಿ ವಕ್ಫ್ ಪ್ರತಿಪಾದಿಸುತ್ತಿದೆ. ಸವಣೂರು ತಾಲೂಕು ಕಡಕೋಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತ ದೇವಸ್ಥಾನದ ಅತಿಕ್ರಮಣಕ್ಕೆ ವಕ್ಫ್ ಬೋರ್ಡ್ ಮುಂದಾಗಿದೆ. ಕೊಪ್ಪಳ ಜಿಲ್ಲೆ ಕುಕನೂರು ಪಟ್ಟಣ ಪಂಚಾಯಿತಿ ಕಾರ್ಯಾಲಯವೂ ವಕ್ಫ್ ಆಸ್ತಿ ಎಂದು ವಕ್ಫ್ ಹಕ್ಕು ಮಂಡಿಸಿದೆ. ಇವು ಕೆಲವು ಉದಾಹರಣೆಗಳಷ್ಟೇ. ವಕ್ಫ್ ಬೋರ್ಡಿನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆಯ ತಂತ್ರಗಾರಿಕೆಯಾಗಿದೆ. ಬಿಜೆಪಿ ಈ ತಂತ್ರಗಾರಿಕೆ ಒಪ್ಪುವುದಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಸಲ್ಲಿಸಿದ ಮನವಿಯಲ್ಲಿ ವಿವರಿಸಿದ್ದಾರೆ.