ನಾಳೆ ಮತದಾನ ಜಾಗೃತಿಗಾಗಿ ವಾಕಥಾನ್‌: ಜಿಲ್ಲಾಧಿಕಾರಿ

KannadaprabhaNewsNetwork |  
Published : Mar 28, 2024, 12:46 AM IST
ಬೀದರ್‌ನ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ- 2024ರ ಅಂಗವಾಗಿ ಮತದಾನ ಜಾಗೃತಿ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಎಲ್ಲಾ ಅಧಿಕಾರಿಗಳು ಭಾಗವಹಿಸಬೇಕು. ಪರೀಕ್ಷೆಗಳಿವೆ, ವಾಕಥಾನ್‌ನಲ್ಲಿ ಶಾಲಾ ಮಕ್ಕಳ ಭಾಗವಹಿಸುವಿಕೆ ಬೇಡ. ಶುಕ್ರವಾರ ಬೆಳಗ್ಗೆ 6.30ಕ್ಕೆ ಬರೀದಶಾಹಿ ಗಾರ್ಡನ್‌ದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ವಾಕಥಾನ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಜಿಲ್ಲಾಡಳಿತ, ಜಿಲ್ಲಾ ಸ್ವೀಫ್‌ ಸಮಿತಿ ವತಿಯಿಂದ ಮಾ.29ರಂದು ನಗರದಲ್ಲಿ ಮತದಾನ ಜಾಗೃತಿ ಕುರಿತು ವಾಕಥಾನ್‌ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬರೀದ್‌ಶಾಹಿ ಗಾರ್ಡನ್‌ದಿಂದ ನೆಹರು ಕ್ರೀಡಾಂಗಣದವರೆಗೆ ವಾಕಥಾನ್‌: ಮಾ. 29ರಂದು ಶುಕ್ರವಾರ ಬೆಳಿಗ್ಗೆ 6.30ಕ್ಕೆ ಬರೀದಶಾಹಿ ಗಾರ್ಡನ್‌ದಿಂದ ಜಿಲ್ಲಾ ನೆಹರು ಕ್ರೀಡಾಂಗಣದವರೆಗೆ ವಾಕಥಾನ್‌ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ-ತಮ್ಮ ಇಲಾಖೆಯ ಬ್ಯಾನರ್‌ಗಳೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಇದರ ಉದ್ದೇಶ ಜನರಲ್ಲಿ ಮತದಾನದ ಮಹತ್ವ ಕುರಿತು ಅರಿವು ಮೂಡಿಸುವದಾಗಿದೆ ಎಂದು ಹೇಳಿದರು.

ಶಾಲಾ ಮಕ್ಕಳ ಭಾಗವಹಿಸುವಿಕೆ ಬೇಡ: ಈಗ ಶಾಲಾ ಮಕ್ಕಳ ಪರೀಕ್ಷೆಗಳು ನಡೆಯುತ್ತಿರುವುದರಿಂದ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬೇಡ. ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇದರಲ್ಲಿ ಭಾಗವಹಿಸುವವರು ಬಿಳಿ ಟೀ ಶರ್ಟ್‌ ಧರಿಸಿಕೊಂಡು ಬರಬೇಕು ಎಂದು ತಿಳಿಸಿದರು.

ವಾಕಥಾನ್‌ ನಂತರ ನೆಹರು ಕ್ರೀಡಾಂಗಣದಲ್ಲಿ ಸ್ವೀಪ್‌ ಕ್ರಿಕೆಟ್‌ ಪಂದ್ಯಾವಳಿ: ವಾಕಥಾನ್‌ ನಂತರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಸ್ವೀಪ್‌ ಕ್ರಿಕೆಟ್‌ ಪಂದ್ಯಾವಳಿ, ಸ್ವೀಪ್‌ ಲೋಗೊ ಪ್ರದರ್ಶನ ಇರಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗೆ ಬೆಳಗಿನ ಉಪಹಾರದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ ಬದೋಲೆ ಮಾತನಾಡಿ, ವಾಕಥಾನ್‌ ಕಾರ್ಯಕ್ರಮದಲ್ಲಿ ಎರಡರಿಂದ ಮೂರು ಸಾವಿರ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಬೇಕು. ಜನರು ತಪ್ಪದೆ ಮತದಾನ ಮಾಡುವಂತೆ ಅವರಿಗೆ ತಿಳಿಹೇಳಬೇಕು ಮತ್ತು ಮೇ 29ರಂದು ನಡೆಯುವ ವಾಕಥಾನ್‌ ಕಾರ್ಯಕ್ರಮದಲ್ಲಿ ಎಲ್ಲಾ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳ ಅಧಿಕಾರಿಗಳು ಭಾಗವಹಿಸಬೇಕೆಂದರು.

ಕಳೆದ ಸಲಕ್ಕಿಂತ ಈ ಬಾರಿ ಹೆಚ್ಚಿನ ಮತದಾನಕ್ಕೆ ಜಾಗೃತಿ ಕಾರ್ಯಕ್ರಮ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ಮಾತನಾಡಿ, ಸಾರ್ವಜನಿಕರು ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ಕಳೆದ ಸಲಕ್ಕಿಂತ ಈ ಸಲ ಹೆಚ್ಚಿನ ಮತದಾನವಾಗಲು ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕ್ರಿಟಿಕಲ್ ಮತ್ತು ವಲನರೆಬಲ್ ಪೋಲಿಂಗ್ ಭೂತಗಳಲ್ಲಿ ಹೆಚ್ಚಿನ ಮತದಾನ ಆಗಲು ನಮ್ಮ ಪೊಲೀಸರು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಸ್ವೀಫ್ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಜನರಲ್ಲಿ ಮತದಾನದ ಜಾಗೃತಿ ಮೂಡಿಸಬೇಕೆಂದು ಹೇಳಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಧ್ಯಾನೇಶ್ವರ ನೀರಗುಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಪ್ರಭಾಕರ, ಜಿಲ್ಲಾ ಸ್ವೀಪ್‌ ನೋಡಲ್‌ ಅಧಿಕಾರಿ ಗೌತಮ ಅರಳಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೆಶಕ ಸಿಂಧು, ಡಿಡಿಪಿಯು ಚಂದ್ರಕಾಂತ ಶಾಬಾದಕರ್‌, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸದಾಶಿವ ಬಡಿಗೇರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!