ವಕ್ಫ್ ಆಸ್ತಿ ವಿವಾದ: ಬಿಜೆಪಿಯಿಂದ ಪ್ರತಿಭಟನೆ

KannadaprabhaNewsNetwork |  
Published : Nov 05, 2024, 12:30 AM IST
ಗದಗ ತಹಸೀಲ್ದಾರ ಕಚೇರಿ ಮುಂಭಾಗದಲ್ಲಿಯೇ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಯಿತು.  | Kannada Prabha

ಸಾರಾಂಶ

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಗದಗ: ರಾಜ್ಯಾದ್ಯಂತ ರೈತರು, ದೇವಸ್ಥಾನಗಳು ಸೇರಿದಂತೆ ಹಿಂದೂ ಆಸ್ತಿಗಳ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಗದಗ ಶಹರ ಬಿಜೆಪಿ ಕಾರ್ಯಕರ್ತರು ನಗರದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್‌ ಕಚೇರಿ ವರೆಗೂ ಪಾದಯಾತ್ರೆ ನಡೆಸಿದರು.

ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಫ್ ಸಚಿವ ಜಮೀರ್ ಅಹಮದ್ ಖಾನ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗದಗ ತಹಸೀಲ್ದಾರ್ ಕಚೇರಿಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ತಡೆದ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ, ಮಾತಿನ ಚಕಮಕಿ ನಡೆದು ಪೊಲೀಸರನ್ನು ದಾಟಿ ಓಡಿ ಹೋಗಿ ತಹಸೀಲ್ದಾರ್ ಚೇಂಬರ್‌ಗೆ ಕಾರ್ಯಕರ್ತರು ಮುತ್ತಿಗೆ ಹಾಕಿದರು.

ಇದಕ್ಕೂ ಮೊದಲು ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಂತಿ, ಸಾಮರಸ್ಯದ ನಾಡಾಗಿದ್ದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿ ನಿರ್ಮಾಣ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿದ್ದ ಅಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿದೆ. ಇದು ಜಂಟಿ ಪಾರ್ಲಿಮೆಂಟರಿ ಬೋರ್ಡ್‌ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಮಂಡಳಿಯ ಮೂಲಕ ಸರ್ಕಾರ ಅಮಾಯಕ ರೈತರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಸಚಿವ ಜಮೀರ್ ಅಹಮದ್ ನೇರವಾಗಿ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದ ಅವರು ಹಲವಾರು ಉದಾಹರಣೆಗಳ ಸಮೇತ ವಿವರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಮಾತನಾಡಿ, ಇವು ಕೆಲವು ಉದಾಹರಣೆಗಳಷ್ಟೆ. ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಈ ರೀತಿಯ ಗೊಂದಲಗಳು ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತದೆ. ಈಗಾಗಲೇ ಕಡಕೋಳದಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಇದು ಇಡೀ ರಾಜ್ಯವನ್ನು ವ್ಯಾಪಿಸುವ ಸಾಧ್ಯತೆಯಿದೆ. ಇಡೀ ರಾಜ್ಯದ ರೈತರ ಹಿತದೃಷ್ಟಿಯಿಂದ ತನ್ನ ನಿಲುವನ್ನು ತೆಗೆದುಕೊಳ್ಳಬೇಕಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಮೀರ್ ಅಹಮದ್ ಅವರನ್ನು ಸಚಿವ ಸ್ಥಾನದಿಂದ ಉಚ್ಚಾಟಿಸಬೇಕು. ಸಿದ್ದರಾಮಯ್ಯ ಅವರು ರಾಜ್ಯದ ಜನರ ಕ್ಷಮೆ ಕೇಳಬೇಕು. ಇನ್ಮುಂದೆ ಯಾವುದೇ ವಕ್ಫ್ ಅದಾಲತ್ ನಡೆಸದಂತೆ ಸರ್ಕಾರಿ ಆದೇಶ ಹೊರಡಿಸಬೇಕು. ಕೇಂದ್ರ ಸರ್ಕಾರ ತರುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ಸರ್ಕಾರ ಮುಂದಿನ ಅಧಿವೇಶನದಲ್ಲಿ ಒಮ್ಮತದಿಂದ ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡುವುದು ಸೇರಿದಂತೆ ಹಲವಾರು ಬೇಡಿಕೆಗಳ ಪತ್ರವನ್ನು ತಹಸೀಲ್ದಾರ್ ಮೂಲಕ ಸಲ್ಲಿಸಿದರು.

ವಿಜಯಕುಮಾರ ಗಡ್ಡಿ, ಎಂ.ಎಸ್. ಕರಿಗೌಡ್ರ, ನಗರಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ, ಬಿಜೆಪಿ ಗದಗ ಶಹರ ಘಟಕದ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ಮುತ್ತಣ್ಣ ಮುಶಿಗೇರಿ, ಪ್ರಕಾಶ ಅಂಗಡಿ, ಚಂದ್ರಶೇಖರ ತಡಸದ, ಮಹೇಶ ದಾಸರ, ನಿರ್ಮಲಾ ಕೊಳ್ಳಿ, ಲಕ್ಷ್ಮೀ ಶಂಕರ ಖಾಕಿ, ಅಶ್ವಿನಿ ಜಗತಾಪ, ಸ್ವಾತಿ ಅಕ್ಕಿ, ರೇಖಾ, ಶಶಿಧರ್ ದಿಂಡೂರ, ಸುಧೀರ ಖಾಟಗೇರ, ಶಂಕರ ಖಾಕಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಉಗ್ರ ಹೋರಾಟ

ಕಾಂಗ್ರೆಸ್ ಸರ್ಕಾರ ಅತಿಯಾದ ಮುಸ್ಲಿಂ ಓಲೈಕೆ ಮಾಡುತ್ತಿದ್ದು ಇದರಿಂದಾಗಿ ರಾಜ್ಯದಲ್ಲಿ ಸಾಕಷ್ಟು ಅನಾಹುತಗಳಾಗುತ್ತಿವೆ. ಕೂಡಲೇ ಇದನ್ನೆಲ್ಲ ನಿಲ್ಲಿಸಬೇಕು. ರಾಜ್ಯದ ಹಿತಕ್ಕೆ, ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ನಿರ್ಧಾರವನ್ನು ಕಾಂಗ್ರೆಸ್ ತಕ್ಷಣವೇ ಕೈಬಿಡಬೇಕು. ತಮ್ಮ ವೋಟ್ ಬ್ಯಾಂಕ್ ಆಸೆಗಾಗಿ ಅತಿಯಾದ ಮುಸ್ಲಿಂ ಓಲೈಕೆ ಹಾಗೂ ಹಿಂದೂ ವಿರೋಧಿ ನಿರ್ಧಾರಗಳನ್ನು ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ನಗರಸಭೆ ಸದಸ್ಯರಾಘವೇಂದ್ರ ಯಳವತ್ತಿ ಎಚ್ಚರಿಸಿದ್ದಾರೆ.

PREV

Recommended Stories

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ