ಕನ್ನಡಪ್ರಭ ವಾರ್ತೆ ಉಡುಪಿ
ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವ ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಪ್ರಶಾಂತ್ ಭಟ್ ಎಚ್ಚರಿಕೆ ನೀಡಿದ್ದಾರೆ.ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪಿ.ಸಿ.ಪಿ.ಡಿ.ಎನ್.ಟಿ. ಕಾಯಿದೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಒಂದೊಮ್ಮೆ ಲಿಂಗ ಪತ್ತೆ ಮಾಡಿದ ಪ್ರಕರಣಗಳು ಕಂಡುಬಂದಲ್ಲಿ ಹಾಗೂ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರ್ಕಾರದ ನಿಯಮಾನುಸಾರ ಕಾರ್ಯಚಟುವಟಿಕೆಗಳನ್ನು ಮಾಡದೇ ಇರುವಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.ಭ್ರೂಣಲಿಂಗ ಪತ್ತೆಯಿಂದ ಹೆಣ್ಣು ಮತ್ತು ಗಂಡು ಮಕ್ಕಳ ಅನುಪಾತದಲ್ಲಿ ವ್ಯತ್ಯಾಸವಾಗಿ ಸಮಾಜದಲ್ಲಿ ಅಸಮತೋಲನ ಉಂಟಾಗಿ, ಮಹಿಳೆಯರ ಮೇಲೆ ಅಪರಾಧಿಕ ಪ್ರಕರಣಗಳೂ ಸಹ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.
ಉಡುಪಿ ಜಿಲ್ಲೆಯಲ್ಲಿ 2024ನೇ ಸಾಲಿನಲ್ಲಿ ಗಂಡು ಮತ್ತು ಹೆಣ್ಣಿನ ಲಿಂಗಾನುಪಾತ ಸಾವಿರಕ್ಕೆ 966 ಇದೆ ಎಂದ ಅವರು, ಹೆಣ್ಣು ಮಕ್ಕಳ ಅನುಪಾತ ಕಡಿಮೆಯಿರುವ ಗ್ರಾಮಗಳಲ್ಲಿ ಈ ಸಮಸ್ಯೆಯಿಂದ ಆಗುವ ಸಾಮಾಜಿಕ ತೊಂದರೆಗಳ ಬಗ್ಗೆ ಕಾಲೇಜುಗಳ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್ ಮಾತನಾಡಿ, ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಭ್ರೂಣಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧ ಎಂಬ ಬಗ್ಗೆ ಎದ್ದು ಕಾಣುವ ರೀತಿಯಲ್ಲಿ ಫಲಕಗಳನ್ನು ಪ್ರದರ್ಶಿಸಬೇಕು ಹಾಗೂ ಸರ್ಕಾರದ ನಿಯಮಾನುಸಾರ ರಿಜಿಸ್ಟರ್ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.5 ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಎಫ್ ಫಾರ್ಮ್ ಸೇರಿದಂತೆ ಮತ್ತಿತರ ದಾಖಲಾತಿಗಳನ್ನು ನಿರ್ವಹಿಸದ ಕಾರಣ ಕೇಳಿ ನೋಟೀಸ್ ನೀಡಲಾಗಿದೆ ಎಂದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಮಣಿಪಾಲ ಕೆ.ಎಂ.ಸಿ. ಯ ಮಕ್ಕಳ ತಜ್ಞ ಡಾ. ಕಿರಣ ಹೆಬ್ಬಾರ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಸಮಾಜಸೇವಕ ಡಾ. ಗಣೇಶ್ ಪೈ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ದೀಕ್ಷಿತಾ ಹಾಗೂ ಮತ್ತಿತರರು ಇದ್ದರು.