ಕನ್ನಡಪ್ರಭ ವಾರ್ತೆ ಮಂಡ್ಯ
ಕಳೆದ ಆರು ತಿಂಗಳಿಂದ ವೇತನ ಪಾವತಿಯಾಗದಿರುವುದನ್ನು ವಿರೋಧಿಸಿ ಮನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾ ಪಂಚಾಯ್ತಿ ಕಚೇರಿ ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಸೇರಿದ ಹೊರಗುತ್ತಿಗೆ ನೌಕರರು ಮುಂದಿನ ಎರಡು ದಿನಗಳೊಳಗೆ ವೇತನ ಪಾವತಿ ಮಾಡದಿದ್ದರೆ ಎಲ್ಲಾ ಕೆಲಸ-ಕಾರ್ಯಗಳನ್ನು ನಿಲ್ಲಿಸಿ ವೇತನ ಪಾವತಿಯಾಗುವವರೆಗೆ ಅಸಹಕಾರ ಚಳವಳಿ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ರಾಜ್ಯಾದ್ಯಂತ ೩೬೩೨ ನೌಕರರು ಮನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿದ್ದೇವೆ. ಉದ್ಯೋಗಖಾತ್ರಿ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಭಾಗಿಯಾಗಿದ್ದೇವೆ. ಆದರೆ, ನೌಕರರಿಗೆ ಕಳೆದ ಜನವರಿಯಿಂದ ಇಲ್ಲಿಯವರೆಗೆ ವೇತನ ಪಾವತಿಯಾಗಿಲ್ಲ. ಇದರಿಂದ ನೌಕರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಟುಂಬ ನಿರ್ವಹಣೆ, ದಿನಸಿ ಖರೀದಿ, ಮಕ್ಕಳ ಶಾಲಾ ಪ್ರವೇಶಾತಿ, ಕುಟುಂಬ ಸದಸ್ಯರ ವೈದ್ಯಕೀಯ ವೆಚ್ಚ, ಪ್ರಯಾಣವೆಚ್ಚ, ಸಾಲಗಳ ಮರುಪಾವತಿ, ಇಎಂಐ ಸೇರಿದಂತೆ ಅನೇಕ ಖರ್ಚುಗಳನ್ನು ನಿಭಾಯಿಸಲು ತೊಂದರೆ ಉಂಟಾಗುತ್ತಿದೆ ಎಂದು ಅಳಲು ವ್ಯಕ್ತಪಡಿಸಿದರು.ಸಕಾಲದಲ್ಲಿ ವೇತನ ಪಾವತಿಯಾಗದಿರುವುದರಿಂದ ಸ್ನೇಹಿತರು, ಸಂಬಂಧಿಕಕರಲ್ಲಿ ಸ್ವಾಭಿಮಾನ ಅಡವಿಟ್ಟು ಕೈಚಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಲೇವಾದೇವಿಗಾರರಿಂದ ಅನಿವಾರ್ಯವಾಗಿ ಸಾಲ ಮಾಡಿ ಕುಟುಂಬ ನಿರ್ವಹಿಸುವ ದಿನನಿತ್ಯದ ಆಗುಹೋಗುಗಳನ್ನು ನೋಡಿಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಈ ಪರಿಸ್ಥಿತಿಯು ನೌಕರ ವರ್ಗದವರನ್ನು ಮುಜುಗರಕ್ಕೆ ತಳ್ಳುತ್ತಿದೆ. ಪ್ರತಿಯೊಬ್ಬ ನೌಕರರು ಒಂದಲ್ಲಾ ಒಂದು ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಿ ಬಳಲುತ್ತಿದ್ದಾರೆ. ವೇತನ ಪಾವತಿಯಾಗದಿದ್ದರೆ ನೌಕರರ ಆರ್ಥಿಕ ಪರಿಸ್ಥಿತಿ, ಮನೋಬಲ, ಆತ್ಮಸ್ಥೈರ್ಯ ಮತ್ತಷ್ಟು ಕುಸಿಯಲಿದೆ ಎಂದರು.
ಬಾಕಿ ವೇತನ ಪಾವತಿ ವಿಚಾರವಾಗಿ ಮೇಲಧಿಕಾರಿಗಳು ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲವೆಂದು ಇಲ್ಲಿಯವರೆಗೆ ಮಾಹಿತಿ ನೀಡುತ್ತಿದ್ದರು. ಪ್ರಸ್ತುತ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನುದಾನ ಬಿಡುಗಡೆಯಾಗಿದೆ. ರಾಜ್ಯದಿಂದ ಜಿಲ್ಲಾ ಕೇಂದ್ರಕ್ಕೆ ಅನುದಾನ ಬಿಡುಗಡೆಯಾಗಬೇಕಿದೆ. ಆದರೆ, ಹೊಸ ತಂತ್ರಾಂಶದಲ್ಲಿ ವೇತನ ಪಾವತಿ ಮಾಡಲು ತಾಂತ್ರಿಕ ಸಮಸ್ಯೆ ಬಗೆಹರಿಯದೆ ಇರುವುದರಿಂದ ವೇತನ ಪಾವತಿ ವಿಳಂಬವಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ವೇತನ ಪಾವತಿಯಾಗದಿದ್ದರೆ ವೇತನ ಪಾವತಿಯಾಗುವವರೆಗೂ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ ಅವರು, ವೇತನ ಪಾವತಿಗೆ ಅಡ್ಡಿಯಾಗಿರುವ ತಾಂತ್ರಿಕ ಸಮಸ್ಯೆಯನ್ನು ನಿವಾರಿಸುತ್ತಿದ್ದು, ಮುಂದಿನ ಐದು ದಿನಗಳೊಳಗೆ ವೇತನ ಪಾವತಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಎಂ.ಎಲ್.ರವಿಕುಮಾರ್, ಹೇಮಂತ್, ರಮೇಶ್, ಮುನಿರಾಜು, ಕುಸುಮಾ, ಜಗದೀಶ್, ಕಿರಣ್‌ಕುಮಾರ್, ಸರಳಾ, ಆಶಾ, ಕೌಶಲ್ಯ, ಸಂಧ್ಯಾ. ರಶ್ಮಿ, ಶಿಲ್ಪ, ವೀಣಾ, ಶ್ವೇತಾ, ಕಲ್ಪನಾ ಇತರರಿದ್ದರು.