ತ್ಯಾಜ್ಯ ವೈಜ್ಞಾನಿಕ ವಿಲೇ: ಸಂಸದ ಯದುವೀರ್ ಸೂಚನೆ

KannadaprabhaNewsNetwork |  
Published : Jun 23, 2026, 02:45 AM IST
 | Kannada Prabha

ಸಾರಾಂಶ

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಪಾರಂಪರಿಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಅಮೃತ್ 2.0 ಯೋಜನೆ, ಜಲಜೀವನ್ ಅಭಿಯಾನ, ಸ್ವಚ್ಛ ಭಾರತ ಅಭಿಯಾನ, ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣ ಹಾಗೂ ಕೃಷಿ ಚಟುವಟಿಕೆ ಸಂಬಂಧ ಸುದೀರ್ಘ ಚರ್ಚೆ ನಡೆಯಿತು.

ಮಡಿಕೇರಿ: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಪಾರಂಪರಿಕ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು, ಅಮೃತ್ 2.0 ಯೋಜನೆ, ಜಲಜೀವನ್ ಅಭಿಯಾನ, ಸ್ವಚ್ಛ ಭಾರತ ಅಭಿಯಾನ, ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣ ಹಾಗೂ ಕೃಷಿ ಚಟುವಟಿಕೆ ಸಂಬಂಧ ಸುದೀರ್ಘ ಚರ್ಚೆ ನಡೆಯಿತು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯ ಆರಂಭದಲ್ಲಿ ಮಡಿಕೇರಿ ನಗರದ ಪಾರಂಪರಿಕ ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಸಂಬಂಧ ಈಗಾಗಲೇ ಹಲವು ಬಾರಿ ಚರ್ಚೆ ನಡೆದಿದ್ದು, ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ನಗರಸಭೆ ಪೌರಾಯುಕ್ತರಿಗೆ ಸಂಸದರು ನಿರ್ದೇಶನ ನೀಡಿದರು.

ಮಳೆ ಮತ್ತಿತರ ಕಾರಣ ನೀಡದೆ ಕೆಲಸ ಆಗಬೇಕು. ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಲಾಗಿದ್ದು, ಇನ್ನು ಯಾವುದೇ ಕಾರಣ ನೀಡಬಾರದು ಎಂದು ಸಂಸದರು ನಿರ್ದೇಶನ ನೀಡಿದರು.

ಧ್ವನಿಗೂಡಿಸಿದ ವಿಧಾನಪರಿಷತ್ತು ಸದಸ್ಯ ಎಸ್.ಎಲ್.ಭೋಜೇಗೌಡ ಹಾಗೂ ಸುಜಾ ಕುಶಾಲಪ್ಪ ಅವರು ಅನುಪಾಲನಾ ವರದಿಯಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಸಬೂಬು ನೀಡುವಂತಿಲ್ಲ ಎಂದು ತಾಕೀತು ಮಾಡಿದರು.

ದಿಶಾ ಸಮಿತಿ ಸದಸ್ಯರಾದ ಡಾ.ನವೀನ್ ಕುಮಾರ್, ಆರ್.ಕೆ.ಚಂದ್ರು, ನಾಗೇಶ್ ಕುಂದಲ್ಪಾಡಿ, ಕಾಂತಿ ಸತೀಶ್ ಅವರು ಧ್ವನಿಗೂಡಿಸಿದರು.

ವಿಧಾನ ಪರಿಷತ್ತು ಸದಸ್ಯರಾದ ಸುಜಾ ಕುಶಾಲಪ್ಪ ಅವರು ಜಿಲ್ಲೆಯ ಹಲವು ಕಡೆ ರಸ್ತೆ ಬದಿ ಕಸವನ್ನು ಬೀಸಾಡುತ್ತಿದ್ದಾರೆ. ಈ ಬಗ್ಗೆ ಗಮನಹರಿಸಬೇಕು ಎಂದರು.

ಜಿಲ್ಲೆಯ ಹೋಂಸ್ಟೇ ಮತ್ತು ರೆಸಾರ್ಟ್‍ಗಳಲ್ಲಿ ಕಸವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಕೇರಳ ಮತ್ತು ಅಸ್ಸಾಂನಲ್ಲಿ ತ್ಯಾಜ್ಯವನ್ನು ಸರಿಯಾದ ನಿರ್ವಹಣೆ ಮಾಡಲಾಗುತ್ತದೆ. ಆದರೆ ನಮ್ಮ ರಾಜ್ಯದಲ್ಲಿ ಯಥೇಚ್ಛವಾಗಿ ಕಂದಾಯ ಬರುತ್ತಿದ್ದರು ಸರಿಯಾದ ನಿರ್ವಹಣೆ ಕಾಣುತ್ತಿಲ್ಲ ಎಂದು ಸುಜಾ ಕುಶಾಲಪ್ಪ ಅವರು ಅತೃಪ್ತಿ ವ್ಯಕ್ತಪಡಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶೇ.100 ರಷ್ಟು ಕಸ ವಿಲೇವಾರಿಗೆ ಒತ್ತು ನೀಡಲಾಗಿದೆ. ಅಗತ್ಯವಿರುವ ಕಡೆಗಳಲ್ಲಿ ಡಸ್ಟ್ ಬಿನ್ ಇಡಲಾಗಿದೆ ಎಂದರು. ಈ ಕುರಿತು ಮಾತನಾಡಿದ ಸಂಸದರು ಕಸದ ವಿಚಾರಗಳು ಮುಂದಿನ ಸಭೆಗೆ ಬರಬಾರದು. ಈ ಬಗ್ಗೆ ಯೋಜನೆ ರೂಪಿಸಿ ವರದಿ ನೀಡುವಂತೆ ತಾಕೀತು ಮಾಡಿದರು.

ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಪ್ರಗತಿ ಸಂಬಂಧಿಸಿದಂತೆ ಮುಂದಿನ ಸಭೆಯಲ್ಲಿ ಸರಿಯಾದ ಮಾಹಿತಿ ನೀಡಬೇಕು. ಇಲ್ಲದಿದ್ದಲ್ಲಿ ನಿಯಮಾನುಸಾರ ಕ್ರಮವಹಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗುಣಮಟ್ಟದ ಆಹಾರ ಪೂರೈಸಬೇಕು: ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರು ಕೊಡ್ಲಿಪೇಟೆ ವಸತಿ ಶಾಲೆಯಲ್ಲಿ ಗುಣಮಟ್ಟದ ಆಹಾರ ಪೂರೈಸಬೇಕು. ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಎಲ್ಲಾ ವಸತಿ ಶಾಲೆಗಳಿಗೂ ಭೇಟಿ ನೀಡಲಾಗುವುದು ಎಂದು ಹೇಳಿದರು.

ಡಾ.ನವೀನ್ ಕುಮಾರ್ ಅವರು ಜಿಲ್ಲೆಯಲ್ಲಿ ವಿದ್ಯಾರ್ಥಿ ನಿಲಯಕ್ಕೆ ಹೆಚ್ಚಿನ ಬೇಡಿಕೆಯಿದ್ದು, ವಿದ್ಯಾರ್ಥಿ ನಿಲಯ ಆರಂಭಕ್ಕೆ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ಮಾಡಿದರು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ ಅವರು ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ನೋಟ್‍ಪುಸ್ತಕ ಒದಗಿಸಬೇಕು. ಶಾಲೆಯ ಮಾನ್ಯತಾ ನವೀಕರಣ ಕಡತಕ್ಕೆ ಸಹಿ ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದರು.

ಜಿಲ್ಲೆಯಲ್ಲಿ 7 ಪಿಎಂಶ್ರೀ ಶಾಲೆಗಳು ಇದ್ದು, ಇನ್ನಷ್ಟು ಶಾಲೆಗಳ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಭೋಜೇಗೌಡ ಅವರು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ತಡೆಯುವಲ್ಲಿ ಪಕ್ಷಾತೀತವಾಗಿ ಎಲ್ಲರೂ ಕಾರ್ಯಯೋಜನೆ ರೂಪಿಸಬೇಕು ಎಂದು ಸಂಸದರು ಹೇಳಿದರು.

ಪ್ರೋಜೆಕ್ಟ್ ಎಲಿಪೆಂಟ್ ಯೋಜನೆ ಸಂಬಂಧಿಸಿದಂತೆ ಹೆಚ್ಚಿನ ಹಣ ಕೇರಳ ರಾಜ್ಯ ಪಡೆದಿದ್ದು, ಕರ್ನಾಟಕಕ್ಕೆ ಕಡಿಮೆ ಹಣ ಬಂದಿದೆ ಎಂಬ ಅಪಪ್ರಚಾರ ಮಾಡಲಾಗುತ್ತಿದ್ದು, ಇದು ಸರಿಯಲ್ಲ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಹಣ ಬಂದಿದ್ದು, ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಬೇಕಿದೆ ಎಂದರು.ಬುಡಸಮೇತ ತೆರವು: ಭೋಜೇಗೌಡ ಅವರು ಮಾತನಾಡಿ ವನ್ಯಪ್ರಾಣಿಗಳು ಕಾಡಿನಲ್ಲಿ ಇರುವಂತಾಗಲು ಹಲಸು, ಬಿದಿರು, ಬಾಳೆ ಮತ್ತಿತರ ಹಣ್ಣಿನ ಗಿಡಗಳನ್ನು ನೆಡುವಂತಾಗಬೇಕು. ನೀಲಗಿರಿ ಮತ್ತು ಅಕೇಶಿಯಾ ಮರಗಳನ್ನು ಬುಡಸಮೇತ ತೆರವುಗೊಳಿಸಬೇಕು. ಜೊತೆಗೆ ಸೋಲಾರ್ ತಂತಿ ಬೇಲಿ ಅಳವಡಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಸದರು ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಎಂವಿಟಿಐ ವಿದ್ಯಾರ್ಥಿಗಳ ಸಂಶೋಧನೆ: ‘ನಡಿಗೆಯಿಂದ ವಿದ್ಯುತ್ ಉತ್ಪಾದನೆ’
ಸಂಶೋಧನಾ ಕ್ಷೇತ್ರ ಬಡವಾಗುತ್ತಿದೆ: ಪ್ರೊ. ವಿವೇಕ ರೈ ಕಳವಳ‍