ಕನ್ನಡಪ್ರಭ ವಾರ್ತೆ, ಹನೂರು
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ನಿವಾಸಿ ಮಹಾದೇವಸ್ವಾಮಿ (48) ಮೃತ ದುರ್ದೈವಿ. ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಅರಣ್ಯ ವೀಕ್ಷಕನಾಗಿ 15 ವರ್ಷಗಳಿಂದಲೂ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಎಂದಿನಂತೆ ಶನಿವಾರ ರಾತ್ರಿ ಹುಣಸೆಬಯಲು ಅರಣ್ಯ ಪ್ರದೇಶದ ಕಳ್ಳ ಬೇಟೆ ತಡೆ ಶಿಬಿರದಲ್ಲಿದ್ದ ವೇಳೆ ಆನೆ ಶಬ್ಧ ಕೇಳಿ ಹೊರಬಂದಾಗ ಕಾಡಾನೆ ಎದುರಾಗಿ ಮೇಲೆ ದಾಳಿ ಮಾಡಿದೆ. ಕಾಡಾನೆ ಪ್ರಹಾರದಿಂದ ತಪ್ಪಿಸಿಕೊಳ್ಳಲಾಗದೇ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತಾದರೂ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಮಹಾದೇವಸ್ವಾಮಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಮಹಾದೇವಸ್ವಾಮಿ ಕುಟುಂಬಕ್ಕೆ ಸರ್ಕಾರ ಹಾಗೂ ಅರಣ್ಯ ಇಲಾಖೆ ಸೂಕ್ತ ಪರಿಹಾರ ಹಾಗೂ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಕಳೆದ 15 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ ಕಾಡಾನೆ ದಾಳಿಯಿಂದ ಮೃತಪಟ್ಟ ವಿಚಾರ ತಿಳಿಯುತ್ತಿದ್ದಂತೆ ಘಟನೆಯ ಬಗ್ಗೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.